ಹಾಸನ: ನಗರದ ಹಿಮ್ಸ್ ಆವರಣದಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಮೂಲಭೂತ ಸೌಲಭ್ಯ, ಯಂತ್ರೋಪಕರಣ, ವೈದ್ಯರು-ಸಿಬ್ಬಂದಿ ನೇಮಿಸಿ ಶೀಘ್ರ ಕಾರ್ಯಾರಂಭ ಮಾಡಬೇಕು ಎಂದು ಆಗ್ರಹಿಸಿ ಆ.೧೫ ರಂದು ಆಸ್ಪತ್ರೆಯ ನೂತನ ಕಟ್ಟಡದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಹೆಚ್.ಆರ್.ನವೀನ್ ಕುಮಾರ್ ತಿಳಿಸಿದರು.
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಬಲೀಕರಣಕ್ಕಾಗಿ ಆಸ್ಪತ್ರೆ ಉದ್ಘಾಟಿಸಿ ಎಂದು ಹಲವು ದಿನಗಳಿಂದ ಹೋರಾಟ ಮಾಡುತ್ತಿದ್ದೇವೆ. ಮುಂದುವರಿದ ಭಾಗವಾಗಿ ಸ್ವಾತಂತ್ರ್ಯ ದಿನಾಚರಣೆಯಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಅಂದು ನೂತನವಾಗಿ ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿರುವ ಕೃಷ್ಣ ಬೈರೇಗೌಡ ಅವರು ಸ್ಥಳಕ್ಕೆ ಆಗಮಿಸಿ ನಮ್ಮ ಹಕ್ಕೊತ್ತಾಯ ಆಲಿಸಿ, ಜಿಲ್ಲೆಯ ಜನರ ಹಿತದೃಷ್ಟಿಯಿಂದ ಬೇಡಿಕೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸಬೇಕು ಎಂಬುದು ನಮ್ಮ ಆಗ್ರಹವಾಗಿದ್ದು, ನಮ್ಮ ಹೋರಾಟಕ್ಕೆ ನಗರ ಹಾಗೂ ಜಿಲ್ಲೆಯ ಜನರು ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ನಮ್ಮ ಹೋರಾಟಕ್ಕೆ ಮನ್ನಣೆ ಸಿಗದೇ ಇದ್ದರೆ, ಈ ಹೋರಾಟ ಹಂತ ಹಂತವಾಗಿ ಮುಂದುವರಿಯಲಿದೆ, ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ಇದೇ ವೇಳೆ ಜಿಲ್ಲೆಯ ಜನರ ಆರೋಗ್ಯ ಮತ್ತು ಇತ್ತೀಚೆಗೆ ಲೈಂಗಿಕ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲೈಂಗಿಕತೆ ಪ್ರಚಾರ ಆಂದೋಲನ ಹಮ್ಮಿಕೊಳ್ಳಲೂ ನಿರ್ಧರಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಮಾದಿಗ ದಂಡೋರ ಹೋರಾಟ ಸಮಿತಿಯ ವಿಜಯಕುಮಾರ್ ಮಾತನಾಡಿ, ಜಿಲ್ಲೆಯ ಎಲ್ಲ ಶಾಸಕರು, ಸಂಸದರು ವಿಧಾನಸಭೆ ಮತ್ತು ಲೋಕಸಭೆ ಅಧಿವೇಶನದಲ್ಲಿ ದನಿ ಎತ್ತಬೇ ಕು ಎಂದು ಒತ್ತಾಯಿಸಿದರು.
ಹಿರಿಯ ಪತ್ರಕರ್ತ ಆರ್.ಪಿ.ವೆಂಕಟೇಶ್‌ಮೂರ್ತಿ ಮಾತನಾಡಿ, ಕಾವೇರಿ ಆರತಿ ಇತ್ಯಾದಿ ಕಾರ್ಯಕ್ರಮಗಳಿಗೆ ಸರ್ಕಾರ ಹತ್ತಾರು ಕೋಟಿ ವ್ಯಯ ಮಾಡುವ ಬದಲು ಸರ್ಕಾರಿ ಆಸ್ಪತ್ರೆ, ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಹಣ ವಿನಿಯೋಗ ಮಾಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ಮಮತಾ ಶಿವು, ಚಿನ್ನೇನಹಳ್ಳಿ ಸ್ವಾಮಿ, ಸಮೀರ್ ಅಹಮದ್ ಇದ್ದರು.










