ಹಾಸನ: ರಾಜ್ಯದಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸದ, ಅತಿವೃಷ್ಟಿಯಿಂದ ಆಗಿರುವ ಬೆಳೆನಷ್ಟಕ್ಕೆ ಸೂಕ್ತ ಪರಿಹಾರ ನೀಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿ ವತಿಯಿಂದ ಜಿಲ್ಲೆ ಹಾಗೂ ರಾಜ್ಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ತಿಳಿಸಿದರು.
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನಪರ ನೋಟ-ರೈತಪರ ಹೋರಾಟ ಹೆಸರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.


ಕಬ್ಬಿಗೆ ಬೆಲೆಗೆ ಆಗ್ರಹಿಸಿ ರೈತರು ಹೋರಾಟ ಮಾಡಿದರು, ಈಗ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಲು ಹೋರಾಟಕ್ಕೆ ರೈತರು ಸಜ್ಜಾಗುತ್ತಿದ್ದಾರೆ. ಒಟ್ಟಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣವಾಗಿರುವ ರಾಜ್ಯ ಸರ್ಕಾರದ ವಿರುದ್ಧ 2 ಹಂತಗಳಲ್ಲಿ ಬಿಜೆಪಿ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದೆ.
ನ.27 ಮತ್ತು 28 ರಂದು ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ. ಡಿಸೆಂಬರ್ 2 ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ರೈತಸಂಘಟನೆಗಳಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.
ಡಿಸೆಂಬರ್ 8 ರಂದು ಬೆಳಗಾವಿ ಚಳಿಗಾಲದ ಅಧಿವೇಶನಕ್ಕೂ ಮುನ್ನ ರೈತಪರವಾದ ಹೋರಾಟ ಹಮ್ಮಿಕೊಳ್ಳಲಾಗಿದೆ. ವಿವಿಧ ಬೆಲೆಗಳಿಗೆ ಬೆಂಬಲ ಬೆಲೆ ಜೊತೆಗೆ ರೈತರ ಸಮಸ್ಯೆ ಬಗೆಹರಿಸುವುದು ನಮ್ಮ ಉದ್ದೇಶ ಎಂದರು.
ಆಲೂರು-ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮಾತನಾಡಿ, ಅತಿಹೆಚ್ಚು ಮಳೆ ಬಂದು ಬೆಳೆ ಜೊತೆಗೆ ಆಸ್ತಿಪಾಸ್ತಿ ನಷ್ಟವಾಗಿವೆ. ಇದರಿಂದ ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆದರೂ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.
ರೈತರನ್ನು ಸರ್ಕಾರ ಸಂಪೂರ್ಣ ಕಡೆಗಣಿಸಿದೆ. ಹಾಲು ಉತ್ಪಾದಕರಿಗೆ 620 ಕೋಟಿ ಬಾಕಿ ಬಿಡುಗಡೆಗೆ ಇನ್ನೂ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.
ಹಲವು ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಸತಾಯಿಸಲಾಗುತ್ತಿದೆ. ಕೇಂದ್ರ ಸರ್ಕಾರ ಪಿಎಂ
ಕಿಸಾನ್ ಯೋಜನೆಯಡಿ ರೈತರಿಗೆ ಅನುಕೂಲ ಮಾಡುತ್ತಿದ್ದರೆ, ಈ ಸರ್ಕಾರ ಆರ್ಥಿಕ ಸಹಾಯ ಮಾಡುವುದನ್ನೇ ನಿಲ್ಲಿಸಿದೆ ಎಂದು ದೂರಿದರು.
ಗ್ಯಾರಂಟಿ ಭಾಗ್ಯ ಕರುಣಿಸಿ, ಅದಕ್ಕಾಗಿ ಹಣ ಹೊಂದಿಸಲು ಅಭಿವೃದ್ಧಿಯನ್ನೇ ನಿರ್ಲಕ್ಷ್ಯ ಮಾಡಿದ್ದಾರೆ. ಸರ್ಕಾರದ ಈ ಧೋರಣೆ ಖಂಡಿಸಿ ನಮ್ಮ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಮಿತ್ ಶೆಟ್ಟಿ, ಗಿರೀಶ್ ನಂಬಿಹಳ್ಳಿ, ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ನಾರಾಯಣಗೌಡ, ಮಾಧ್ಯಮ ಸಂಯೋಜಕ ನಾಗೇಶ್ ಇದ್ದರು.










