ಅರಸೀಕೆರೆ : ಕಿಡಿಗೇಡಿಗಳು ಕಿಟಕಿ ರಂಧ್ರದ ಮೂಲಕ ಶಾಲಾ ಕೊಠಡಿಗೆ ಬೆಂಕಿ ಇಟ್ಟು ವಿಕೃತ ಆನಂದ ಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 206 ಟಿ.ಎಚ್ ರಸ್ತೆಗೆ ಹೊಂದಿಕೊಂಡಿರುವ ಸರ್ಕಾರಿ ಹಳೆಯ ಹಿರಿಯ ಮಾಧ್ಯಮಿಕ ಪಾಠ ಶಾಲೆಯ ಐದನೇ ತರಗತಿಯ ಕೊಠಡಿಗೆ ಬೆಂಕಿ ಇಟ್ಟಿದ್ದಾರೆ. ಪರಿಣಾಮ ಶಾಲೆಯ ಪೀಠೋಪಕರಣಗಳು ಹಾಗೂ ಆಟೋಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತಮಾನದ ಇತಿಹಾಸವಿರುವ ಈ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಇತ್ತೀಚಿನ ವರ್ಷಗಳಲ್ಲಿ ಕಿಡಿಗೇಡಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಪದೇ ಪದೇ ಶಾಲೆಗೆ ಸಂಬಂಧಿಸಿದ ಆಸ್ತಿ ಪಾಸ್ತಿ ನಷ್ಟವಾಗುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳು, ವಿದ್ಯುತ್ ದೀಪಗಳನ್ನೂ ಸಹ ಕಿಡಿಗೇಡಿಗಳು ಒಡೆದು ಧ್ವಂಸ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪದೇ ಪದೇ ಕಿಡಿಗೆಡಿಗಳಿಂದ ಸಂಭವಿಸುತ್ತಿರುವ ಈ ರೀತಿಯ ದುಷ್ಕ್ರಂತ್ಯದಿಂದ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಪೋಷಕರ ಆತಂಕಕ್ಕೆ ಕಾರಣವಾಗಿದೆ. ಈ ಎಲ್ಲಾ ಕಾರಣಗಳಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದ್ದು, ಕಿಡಿಗೇಡಿಗಳ ದುಷ್ಕ್ರಂತ್ಯ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವಿಶೇಷ ಗಮನ ಹರಿಸಬೇಕೆಂದು ಮನವಿ ಮಾಡಿದರು.
ಶಾಲೆಯ ಸುತ್ತಮುತ್ತ ಇರುವ ಬಡಾವಣೆಯ ಜನತೆಯೊಂದಿಗೂ ಸಹ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕೂಡ ಮುಂದಾಗಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ವೇಳೆ ಸಮೂಹ ಸಂಪನ್ಮೂಲ ಅಧಿಕಾರಿ ವಿಷ್ಣುವರ್ಧನ್, ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಸಹ ಶಿಕ್ಷಕರಾದ ಚಂದ್ರನಾಯಕ್, ಮಹೇಶ್ ಮತ್ತು ಇತರರು ಉಪಸ್ಥಿತರಿದ್ದರು.










