ಹಾಸನ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ಖಂಡಿಸಿ ಬೃಹತ್ ಪ್ರತಿಭಟನೆ

Activists of the Vishwa Hindu Parishad, BJP, and pro-Hindu organizations held a massive protest condemning the ongoing massacre and atrocities against Hindus in Bangladesh.

ಹಾಸನ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹತ್ಯಾಕಾಂಡ ಹಾಗೂ ದೌರ್ಜನ್ಯ ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಮಹಾವೀರ ವೃತ್ತ, ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ನೂರಾರು ಮಂದಿ ಎನ್.ಆರ್.ವೃತ್ತದ ಮೂಲಕ ಡಿಸಿ ಕಚೇರಿ ತಲುಪಿದರು.

ಈ ವೇಳೆ ಮಾತನಾಡಿದ ಅನೇಕರು, ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ದೀಪು ಚಂದ್ರ ದಾಸ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಕ್ರೂರ ಹಾಗೂ ಮಾನವೀಯತೆ ವಿರೋಧಿ ಕೃತ್ಯವಾಗಿದೆ ಎಂದು ಕಿಡಿ ಕಾರಿದರು.

ಈ ರೀತಿಯ ಘಟನೆಗಳಿಂದ ಅಲ್ಲಿನ ಹಿಂದೂ ಸಮುದಾಯ ಭಯಭೀತರಾಗಿದ್ದು, ಅವರ ಜೀವ ಮತ್ತು ಆಸ್ತಿಯ ರಕ್ಷಣೆಗೆ ಭಾರತ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಳೆದ ಎರಡು ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಹತ್ಯೆ ಹಾಗೂ ದೌರ್ಜನ್ಯ ನಡೆಯುತ್ತಿದ್ದು, ಇದನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ರಾಜತಾಂತ್ರಿಕವಾಗಿ ಹಸ್ತಕ್ಷೇಪ ಮಾಡಿ ಹಿಂದುಗಳ ರಕ್ಷಣೆಗೆ ಧಾವಿಸಬೇಕೆಂದು ಒತ್ತಾಯಿಸಿದರು.

ಇದಲ್ಲದೆ, ಅಕ್ರಮವಾಗಿ ಬಾಂಗ್ಲಾದೇಶದಿಂದ ವಲಸೆ ಬಂದಿರುವವರು ದೇಶ ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ನೆಲೆಸಿರುವ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಇಂತಹ ಅಕ್ರಮ ವಲಸಿಗರನ್ನು ತಕ್ಷಣವೇ ಗುರುತಿಸಿ ಗಡಿಪಾರು ಮಾಡಬೇಕು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಭಜರಂಗದಳದ ಕಾರ್ಯಕರ್ತರು ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೆಲಹೊತ್ತು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು, ಅಂತಿಮವಾಗಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ವಿಶ್ವ ಹಿಂದೂ ಪರಿಷತ್ ಕಾರ್ಯ ನಿರ್ವಾಹಕ ವಿಜಯಕುಮಾರ್, ಮಹಿಪಾಲ್, ಭಜರಂಗ ದಳದ ಲೋಕೇಶ್, ಬಿಜೆಪಿ ವ್ಯಾಪಾರ ಪ್ರಕೋಷ್ಠದ ರಾಜ್ಯ ಸಂಚಾಲಕ ನಾಗೇಶ್, ಭಜರಂಗ ದಳದ ಕಾರ್ಯಕರ್ತ ಅಭಿಲಾಶ್ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Activists of the Vishwa Hindu Parishad, BJP, and pro-Hindu organizations held a massive protest condemning the ongoing massacre and atrocities against Hindus in Bangladesh.