ಹುಬ್ಬಳ್ಳಿ : ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ಪೊಲೀಸರು ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಈ ಕುರಿತು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಆಯೋಗವು ಪತ್ರ ಬರೆದಿದೆ.
ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಯಕರ್ತೆಯನ್ನು ಬಂಧಿಸುವ ವೇಳೆ ಪೊಲೀಸರು ಹಲ್ಲೆ ನಡೆಸಿದ್ದು, ಅವರ ಬಟ್ಟೆ ಹರಿದಿರುವ ಆಕ್ಷೇಪಾರ್ಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದೆ. ಆಯೋಗದ ಅಧ್ಯಕ್ಷೆ ಶ್ರೀಮತಿ ವಿಜಯಾ ರಹಾಟ್ಕರ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಮಹಿಳೆಯ ಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಗಂಭೀರ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ, ಪ್ರಕರಣಕ್ಕೆ ತಕ್ಷಣವೇ ಎಫ್‌ಐಆರ್ ದಾಖಲಿಸಿ, ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಆಧಾರದ ಮೇಲೆ ನಿಖರ ಹಾಗೂ ಸಮಯಬದ್ಧ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ಹಾಗೂ ಮಹಿಳೆಯ ಜತೆಗೆ ಅಸಭ್ಯವಾಗಿ ವರ್ತಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಯೋಗ ಒತ್ತಾಯಿಸಿದೆ.
ಜೊತೆಗೆ ಸಂತ್ರಸ್ತ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಬೆಂಬಲ ಹಾಗೂ ಕಾನೂನುಬದ್ಧ ಪರಿಹಾರ ಒದಗಿಸುವಂತೆ ಸೂಚಿಸಿದೆ. ಈ ಪ್ರಕರಣದಲ್ಲಿ ಕೈಗೊಂಡ ಕ್ರಮಗಳ ಕುರಿತು 5 ದಿನಗಳ ಒಳಗೆ ವಿವರವಾದ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿದೆ.
ಇತ್ತ ಈ ಘಟನೆಯ ಹಿನ್ನೆಲೆ ಹುಬ್ಬಳ್ಳಿ–ಧಾರವಾಡ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಾನಗರ ಪಾಲಿಕೆ ಸದಸ್ಯೆ ಸುವರ್ಣಾ ಕಲಕುಂಟ್ಲಾ, ಡೇವಿಡ್ ಸೇರಿದಂತೆ ಒಟ್ಟು 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ, ಗಲಭೆ ಸೇರಿ ಗಂಭೀರ ಆರೋಪಗಳಡಿ ಪ್ರಕರಣ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 109, 115(2), 118(1), 189(2), 191(2), 74, 190 ಹಾಗೂ 351ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿ, ಪೊಲೀಸ್ ಕಮಿಷನರ್ ಈಗಾಗಲೇ ಪ್ರಕರಣದ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಅದಾದ ಮೇಲೆ ಇನ್ನೇನು ಅನುಮಾನಕ್ಕೆ ಅವಕಾಶವಿಲ್ಲ. ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂಪ್ರೇರಿತವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ ಎಂದು ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.










