Hassan|ಹಾಸನ | ಕನ್ನಡಪೋಸ್ಟ್ ವರದಿ
ಹಾಸನ: (kannadapost.com) ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಬಳಿ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದುರ್ಘಟನೆ ಸಂಭವಿಸಿದೆ.
ಮೃತರನ್ನು ಕುಂದಾಪುರ ಮೂಲದ ಕೃಷ್ಣಶೆಟ್ಟಿ (42) ಎಂದು ಗುರುತಿಸಲಾಗಿದೆ. ಈ ಭೀಕರ ಅಪಘಾತದಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಬೆಳಿಗ್ಗೆ 5 ಗಂಟೆ ವೇಳೆ ದುರಂತ
ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ದುರ್ಗಾಂಬ ಖಾಸಗಿ ಬಸ್ ನಡುವೆ ಇಂದು ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ ಅಪಘಾತ ನಡೆದಿದೆ.
ಖಾಸಗಿ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಚಾಲಕನ ನಿದ್ರೆ ಮಂಪರಿನಿಂದ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಬಸ್ ಮುಂಭಾಗ ನಜ್ಜುಗುಜ್ಜು
ಡಿಕ್ಕಿ ರಭಸಕ್ಕೆ ಖಾಸಗಿ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಗಾಯಾಳುಗಳಿಗೆ ಚಿಕಿತ್ಸೆ
ಗಾಯಗೊಂಡವರನ್ನು ಹಿರಿಸಾವೆ ಹಾಗೂ ಬೆಳ್ಳೂರು ಕ್ರಾಸ್‌ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸ್ ಪರಿಶೀಲನೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೊಳಗಾದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










