Sakaleshpura|ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ದಾಟುತ್ತಿದ್ದ ಯುವಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಯಿಂದ ಯುವಕ ಸುಮಾರು 20 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾಯಗೊಂಡ ಯುವಕನನ್ನು ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಪ್ರದೇಶದಲ್ಲಿ ನಡೆದಿದೆ.
ಬೆಂಗಳೂರಿನ ಹೈಕೋರ್ಟ್ ವಕೀಲರಾದ ಶಿವಕುಮಾರ್ ಅವರಿಗೆ ಸೇರಿದ್ದ ಕಾರು ಈ ಅಪಘಾತಕ್ಕೆ ಕಾರಣವಾಗಿದ್ದು, ಅವರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಿಂದ ಕುಂದಾಪುರದ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಡಿಕ್ಕಿಯ ರಭಸ ಸ್ಪಷ್ಟವಾಗಿ ಕಾಣಿಸುತ್ತದೆ.
ಗಾಯಗೊಂಡ ದಿನೇಶ್ ಕುಮಾರ್ ಅವರನ್ನು ತಕ್ಷಣ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.









