ಹಾಸನ: ಲಾರಿಗೆ ಹಿಂಬದಿಯಿಂದ ಗುದ್ದಿದ ಕೆಎಸ್‌ಆರ್‌ಟಿಸಿ ಬಸ್, 20ಕ್ಕೂ ಹೆಚ್ಚು ಮಂದಿಗೆ ಗಾಯ | Hassan KSRTC Bus Accident

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ದಂಡಿಗನಹಳ್ಳಿ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ. ಲಾರಿಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದ್ದು, ಚಾಲಕ ಸೇರಿ ಮೂವರು ಗಂಭೀರ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ. ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ.

Hassan|ಹಾಸನ: (kannadapost.com) ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಲಾರಿಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಲಾರಿ ಹಾಗೂ ಸಾರಿಗೆ ಬಸ್ ಎರಡೂ ವಾಹನಗಳು ಬೆಂಗಳೂರು ಕಡೆಯಿಂದ ಹಾಸನದ ಕಡೆಗೆ ಬರುತ್ತಿದ್ದವು. ಈ ವೇಳೆ ಮುಂದಿದ್ದ ಲಾರಿಗೆ ಹಿಂಬದಿಯಿಂದ ಬಂದು ಬಸ್ ರಭಸವಾಗಿ ಗುದ್ದಿದೆ.

ಮೂವರ ಸ್ಥಿತಿ ಗಂಭೀರ:

ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಇದರಲ್ಲಿ ಬಸ್ ಚಾಲಕ ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ರಕ್ಷಿಸಿ ಹಾಸನದ ಹಿಮ್ಸ್ (HIMS) ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ನಿದ್ರೆ ಮಂಪರು ಕಾರಣ?

ಘಟನೆ ಮುಂಜಾನೆ ನಡೆದಿರುವುದರಿಂದ ಸಾರಿಗೆ ಬಸ್ ಚಾಲಕ ನಿದ್ರೆ ಮಂಪರಿನಲ್ಲಿದ್ದದ್ದೇ ಈ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮುಂದಿದ್ದ ಲಾರಿಗೆ ಬಸ್ ಅಪ್ಪಳಿಸಿದೆ ಎನ್ನಲಾಗಿದೆ.

​ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.