Hassan|ಹಾಸನ, ಜೂನ್ 8: ನಗರದಲ್ಲಿ ಸೋಮವಾರ ಬೆಳಗಿನ ಜಾವ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರಿನ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದಿದ್ದಾರೆ.
ಮೃತನನ್ನು ಮಂಜೇಶ್ (43) ಎಂದು ಗುರುತಿಸಲಾಗಿದೆ. ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಮುಂಭಾಗ ಈ ಭೀಕರ ಕೃತ್ಯ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮಂಜೇಶ್ ಅವರ ತಾಯಿ ಹಾಸನ ಮೂಲದವರಾಗಿದ್ದು, ಮಂಜೇಶ್ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಲ್ಲಿಯೇ ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದ ಅವರು ಕೆಲವು ಕೆಲಸದ ನಿಮಿತ್ತ ಹಾಸನಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಮಂಜೇಶ್ ಮೇಲೆ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದ ಹಂತಕರು, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಂಡಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಈ ಸಂಬಂಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ಮುಂದುವರಿಸಲಾಗಿದೆ.
ಈ ಘಟನೆ ಹಾಸನ ನಗರದಲ್ಲಿ ಆತಂಕ ಸೃಷ್ಟಿಸಿದ್ದು, ಹತ್ಯೆಯ ಹಿಂದಿನ ಕಾರಣಗಳ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
– kannadapost.com










