ರಾಮನಗರ, ಆ. 8, 2026(kannadapost.com) : ಬೆಂಗಳೂರು–ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿ, ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಪರಿಣಾಮ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.












