ಸಕಲೇಶಪುರ (kannadapost.com): ಹಾಲಿನ ಡೇರಿಗೆ ಹಾಲು ಹಾಕಿ ಮನೆಗೆ ಹಿಂದಿರುಗುತ್ತಿದ್ದ ಬೈಕ್ ಸವಾರರಿಗೆ ಅತಿವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ.
ಬನವಾಸೆ ಕಡೆಯಿಂದ ಬೈಕ್‌ನಲ್ಲಿ ಬರುತ್ತಿದ್ದ ಈರೇಶ್ (55) ಗಾಯಗೊಂಡಿದ್ದು ರಾಜಣ್ಣ (58) ಮೃತಪಟ್ಟಿದ್ದಾರೆ.
ಸಕಲೇಶಪುರ ಕಡೆಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ಹಿಮ್ಸ್ ಆಸ್ಪತ್ರೆಗೆ ರವಾನೆ:
ಅಪಘಾತದ ತೀವ್ರತೆಗೆ ಈರೇಶ್ ಮತ್ತು ರಾಜಣ್ಣ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದರಿಂದ, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್ (HIMS) ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೇ ರಾಜಣ್ಣ ಮೃತರಾದರು.
ಹಂಪ್ಸ್ ಅಳವಡಿಸಲು ಗ್ರಾಮಸ್ಥರ ಆಗ್ರಹ:
ಬಾಳ್ಳುಪೇಟೆ ಭಾಗದ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ವಾಹನಗಳ ಅತಿವೇಗದಿಂದಾಗಿ ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಸಂಭಾವ್ಯ ಅನಾಹುತಗಳನ್ನು ತಡೆಗಟ್ಟಲು ರಸ್ತೆಗೆ ತಕ್ಷಣವೇ ವೈಜ್ಞಾನಿಕವಾಗಿ ಹಂಪ್ಸ್ (ರಸ್ತೆ ಉಬ್ಬು) ಅಳವಡಿಸಬೇಕು ಎಂದು ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.












