14.2 C
Munich
Home ಮನರಂಜನೆ ರಂಗಭೂಮಿ ಕಲಾವಿದ, ನಿರ್ದೇಶಕ ಯಶವಂತ ಸರದೇಶಪಾಂಡೆ ಇನ್ನಿಲ್ಲ

ರಂಗಭೂಮಿ ಕಲಾವಿದ, ನಿರ್ದೇಶಕ ಯಶವಂತ ಸರದೇಶಪಾಂಡೆ ಇನ್ನಿಲ್ಲ

ರಂಗಭೂಮಿ ಕಲಾವಿದ, ನಿರ್ದೇಶಕ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕನ್ನಡ ರಂಗಭೂಮಿ ಮತ್ತು ಸಿನಿಮಾ ನಟ, ರಂಗನಿರ್ದೇಶಕ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ಇಂದು (ಸೆಪ್ಟೆಂಬರ್‌ 29) ಅಗಲಿದ್ದಾರೆ. ಉತ್ತರ ಕರ್ನಾಟಕದ ಪ್ರಮುಖ ರಂಗಕರ್ಮಿ ಸರದೇಶಪಾಂಡೆ ಅವರ ಅಗಲಿಕೆಗೆ ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ಪ್ರಮುಖರನೇಕರು ತೀವ್ರ ಸಂತಾಪ ಸೂಚಿಸಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ, ಯಶವಂತ ಸರದೇಶಪಾಂಡೆ ಅವರ ಜನ್ಮಸ್ಥಳ. ಹೆಗ್ಗೋಡಿನ ನಿನಾಸಂನಿಂದ ಡಿಪ್ಲೊಮಾ ಪದವಿ ಪಡೆದು ನಂತರ ನ್ಯೂಯಾರ್ಕ್‌ ವಿಶ್ವವಿದ್ಯಾಯದಿಂದ ನಾಟಕ ರಚನೆ, ಚಲನ ಚಿತ್ರ ಸಂಭಾಷಣೆಯ ವಿಶೇಷ ತರಬೇತಿ ಪಡೆದು ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದಾರೆ. ಆಲ್‌ ದಿ ಬೆಸ್ಟ್, ರಾಶಿ ಚಕ್ರ, ಸಹಿ ರೀ ಸಹಿ, ದಿಲ್ ಮಾಂಗೆ ಮೋರ್‌… ಅವರ ನಟನೆಯ ಕೆಲವು ಅತ್ಯಂತ ಜನಪ್ರಿಯ ನಾಟಕಗಳೂ.

ಯದ್ವಾ-ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶಾಮಭಾಮ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಧಾರಾವಾಹಿ ಮತ್ತು ಸಿನಿಮಾಗಳಿಗೆ ಸಂಭಾಷಣೆ ರಚಿಸಿದ್ದಾರೆ.

ಯಶವಂತ ಸರದೇಶಪಾಂಡೆ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಅಂಧಯುಗ, ಇನ್‌ಸ್ಪೆಕ್ಟರ್‌ ಜನರಲ್, ಮಿಡ್‌ ಸಮರ್‌ ನೈಟ್ಸ್‌ ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ… ಕೆಲವು ಪ್ರಮುಖ ನಾಟಕಗಳು. ಅವರ ಪತ್ನಿ ಮಾಲತಿ ಸರದೇಶಪಾಂಡೆ ಅವರೂ ರಂಗಭೂಮಿ, ಸಿನಿಮಾ ಹಾಗೂ ಕಿರುತೆರೆ ಕಲಾವಿದೆ.

error: Content is protected !!