ಹಾಸನ: ಕೆಪಿಎಸ್–ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ನಿಟ್ಟೂರು ಗ್ರಾಮ ಪಂಚಾಯಿತಿಗೆ ವಿಲೀನಗೊಳಿಸಲು ಹೊರಟಿರುವ ಯಲಗುಂದ ಸರ್ಕಾರಿ ಶಾಲೆಯನ್ನು ಉಳಿಸುವಂತೆ ಆಗ್ರಹಿಸಿ ಎಐಡಿಎಸ್ಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಹಾಸನ ಜಿಲ್ಲಾ ಕೌನ್ಸಿಲ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಯಲಗುಂದದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಚೈತ್ರ, ಒಂದು ಬಾರಿ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಯನ್ನು ಮುಚ್ಚಿದರೆ, ನಂತರ ಎಷ್ಟೇ ಪ್ರಯತ್ನಪಟ್ಟರೂ ಅದನ್ನು ಪುನರ್ ಆರಂಭಿಸುವುದು ಸಾಧ್ಯವಾಗುವುದಿಲ್ಲ. ಒಂದೇ ಒಂದು ಮಗು ಇದ್ದರೂ ಆ ಮಗುವಿಗೆ ಶಾಲೆ ಇರಬೇಕು, ಶಿಕ್ಷಕರನ್ನು ನೇಮಕ ಮಾಡಬೇಕು ಎಂಬ ನಿಲುವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಾರ್ವಜನಿಕವಾಗಿ ಹೇಳಿದ್ದಾರೆ. ಆ ಹೇಳಿಕೆಗೆ ಸರ್ಕಾರ ಬದ್ಧವಾಗಿರಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾರ್ಯದರ್ಶಿ ಸುಷ್ಮಾ ಮಾತನಾಡಿ, ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಕೆಪಿಎಸ್–ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಪೋಷಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಯೋಜನೆಯ ಹೆಸರಿನಲ್ಲಿ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡನೀಯವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಇಲ್ಲ ಎನ್ನುವುದು ಸತ್ಯವಲ್ಲ. ಪ್ರಸ್ತುತ ಸುಮಾರು 37 ಲಕ್ಷ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಸರ್ಕಾರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ 21,000ಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ವರ್ಷಗಳಿಂದ ದುರಸ್ತಿಯಾಗಿಲ್ಲ. ಅಲ್ಲದೆ 60,000ಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಈ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸದೆ ಗ್ರಾಮೀಣ ಪ್ರದೇಶದ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಯಲಗುಂದ ಸರ್ಕಾರಿ ಶಾಲೆ ಉಳಿಸಿ ಸಮಿತಿಯನ್ನು ರಚಿಸಲಾಯಿತು. ಸರ್ಕಾರಿ ಶಾಲೆ ಉಳಿಸಲು ಗ್ರಾಮಸ್ಥರು ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ಪ್ರತಿಭಟನಾಕಾರರು ಕರೆ ನೀಡಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಚೈತ್ರ, ಜಿಲ್ಲಾ ಕಾರ್ಯದರ್ಶಿ ಸುಷ್ಮಾ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಾದ ಆಶಿಕ್, ಬಸವರಾಜು, ಚಂದ್ರಶೇಖರ್, ದಿನೇಶ್, ಜಗದೀಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
Addressing the protest, AIDSO District President Chaitra said that once the Education Department closes a government school, it will not be possible to reopen it, no matter how much effort is made.










