ಹಾಸನ: ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ನಗರದ ಸ್ಕಾಲರ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ತಯಾರಿಸಿದ ವಿವಿಧ ರೀತಿಯ ಯಂತ್ರಗಳು ಹಾಗೂ ವಿಜ್ಞಾನ ಮಾದರಿಗಳು ಎಲ್ಲರ ಗಮನ ಸೆಳೆದವು.
ಕಾರ್ಯಕ್ರಮವನ್ನು ಎಂಸಿಎಫ್ ಹಾಸನ ವಿಭಾಗದ ಹಿರಿಯ ನಿರ್ದೇಶಕರಾದ ರಜಿನೀಶ್ ಶರ್ಮಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜ್ಞಾನ ಮಾದರಿಗಳು ಕೇವಲ ಪ್ರದರ್ಶನಕ್ಕಷ್ಟೇ ಸೀಮಿತವಾಗದೆ ಸಮಾಜಕ್ಕೆ ಉಪಯೋಗವಾಗುವಂತಹ ಅನ್ವಯಿಕ ರೂಪದಲ್ಲಿ ಇರಬೇಕು ಎಂದು ಹೇಳಿದರು. ವಿಜ್ಞಾನದ ಬೆಳವಣಿಗೆಯಿಂದ ದೇಶದ ಪ್ರಗತಿ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ಸಂಶೋಧನಾ ಮನೋಭಾವವನ್ನು ಉತ್ತೇಜಿಸುವ ಪ್ರಮುಖ ವೇದಿಕೆಯಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಹೊಸ ಆಲೋಚನೆಗಳನ್ನು ಅಭಿವೃದ್ಧಿಪಡಿಸಿ ನೈಜ ಜೀವನದ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಪ್ರತಿ ವರ್ಷ ಫೆಬ್ರವರಿ 28ರಂದು ಭಾರತೀಯ ಮಹಾನ್ ಭೌತಶಾಸ್ತ್ರಜ್ಞ ಸರ್ ಸಿ.ವಿ. ರಾಮನ್ ಅವರ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ವಿಜ್ಞಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ಹಾಗೂ ಸಂಶೋಧನೆಗೆ ಪ್ರೇರೇಪಿಸುವುದೇ ಈ ದಿನದ ಪ್ರಮುಖ ಉದ್ದೇಶವಾಗಿದೆ.
ಈ ಹಿನ್ನೆಲೆಯಲ್ಲಿ ಸ್ಕಾಲರ್ಸ್ ಶಾಲೆಯ ವಿದ್ಯಾರ್ಥಿಗಳು ನೂರಕ್ಕೂ ಹೆಚ್ಚು ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದ್ದು, ಅತಿಥಿಗಳು ಹಾಗೂ ಪೋಷಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಶಾಲೆಯ ಆಡಳಿತಾಧಿಕಾರಿಗಳಾದ ಡಾ. ಎಚ್.ಎನ್. ಚಂದ್ರಶೇಖರ್ ಮಾತನಾಡಿ, ಸಾಧನೆ ಮಾಡುವ ಆಸಕ್ತಿ ವಿದ್ಯಾರ್ಥಿಗಳಲ್ಲಿ ಮೂಡಿದಾಗ ಅವರ ಬೆಳವಣಿಗೆ ಸಾಧ್ಯವಾಗುತ್ತದೆ. ಈ ವಿಜ್ಞಾನ ಪ್ರದರ್ಶನ ವಿದ್ಯಾರ್ಥಿಗಳ ಕ್ರಿಯಾಶೀಲತೆಯ ಪ್ರತಿಬಿಂಬವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಮತಾ ಚಂದ್ರಶೇಖರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸಿದವರು ವಿದ್ಯಾರ್ಥಿಗಳ ಸೃಜನಶೀಲತೆಗೆ ಅಭಿನಂದನೆ ಸಲ್ಲಿಸಿದರು.
As part of National Science Day, a science exhibition was organized at the city’s Scholars School, and the various machines and science models made by the students attracted everyone’s attention.










