ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಎಎಸ್‌ಐ ಅಲ್ಲಾಭಕ್ಷ ಕರೋಶಿ (54) ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ಬೀಳಗಿ ಪೊಲೀಸ್ ಠಾಣೆಯಿಂದ ಬಾಗಲಕೋಟೆ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದ ಅವರು, ಹೊಸ ಕರ್ತವ್ಯಕ್ಕೆ ಹಾಜರಾಗಲು ಮನೆಯಿಂದ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಠಾಣೆಗೆ ತೆರಳುವಾಗಲೇ ಕುಸಿದು ಬಿದ್ದರು
ಅಲ್ಲಾಭಕ್ಷ ಕರೋಶಿ ಅವರು ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದ ನಿವಾಸಿಯಾಗಿದ್ದರು. ಮಂಗಳವಾರ ಬೆಳಿಗ್ಗೆ ಮನೆಯಿಂದ ಬಾಗಲಕೋಟೆ ನಗರ ಪೊಲೀಸ್ ಠಾಣೆಗೆ ತೆರಳುತ್ತಿದ್ದ ವೇಳೆ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದೆ.
ಹಠಾತ್ ಕುಸಿದು ಬಿದ್ದ ಅವರನ್ನು ಸ್ಥಳದಲ್ಲಿದ್ದವರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಬಳಿಕ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದರು.
ಪೊಲೀಸ್ ಇಲಾಖೆ ಹಾಗೂ ಕುಟುಂಬದಲ್ಲಿ ಶೋಕ
ಘಟನೆಯಿಂದ ಕುಟುಂಬಸ್ಥರು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಯಲ್ಲಿ ತೀವ್ರ ದುಃಖ ಮನೆಮಾಡಿದೆ. ಹಲವು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಅಲ್ಲಾಭಕ್ಷ ಕರೋಶಿ, ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯಿಂದ ಸಹೋದ್ಯೋಗಿಗಳ ಗೌರವಕ್ಕೆ ಪಾತ್ರರಾಗಿದ್ದರು.
ಇತ್ತೀಚೆಗಷ್ಟೇ ಹೊಸ ಠಾಣೆಗೆ ವರ್ಗಾವಣೆಯಾಗಿದ್ದ ಅವರು, ಮೊದಲ ದಿನವೇ ಕರ್ತವ್ಯಕ್ಕೆ ತೆರಳುವ ವೇಳೆ ವಿಧಿಯಾಟಕ್ಕೆ ಬಲಿಯಾಗಿರುವುದು ಎಲ್ಲರ ಮನಕಲಕಿದೆ.











