ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಇದರಿಂದಾಗಿ ಶಾಸಕನಿಗೆ ಕಾನೂನು ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ.
ಅಜ್ಞಾತ ಸ್ಥಳಕ್ಕೆ ತೆರಳಿದ ಶಾಸಕ ಹೈಕೋರ್ಟ್ನಲ್ಲಿ ಎರಡನೇ ಬಾರಿಯೂ ನಿರೀಕ್ಷಣಾ ಜಾಮೀನು ತಿರಸ್ಕೃತವಾದ ಹಿನ್ನೆಲೆಯಲ್ಲಿ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಬಂಧನದ ಆತಂಕದ ನಡುವೆ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿರುವ ಮಾಹಿತಿ ಲಭ್ಯವಾಗಿದೆ.
ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಾಧ್ಯತೆ
ಇಂದೇ ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಹಿರಿಯ ವಕೀಲರೊಂದಿಗೆ ಚರ್ಚೆ ನಡೆಸಿದ ಅವರು, ಕಾನೂನು ಸಲಹೆ ಪಡೆದು ಅರ್ಜಿ ಸಿದ್ಧಪಡಿಸುತ್ತಿದ್ದಾರೆ ಎನ್ನಲಾಗಿದೆ.
ಬಂಧನಕ್ಕೆ ಸಿಐಡಿ ಸಜ್ಜು
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆರೋಪಿಯಾಗಿರುವ ಬೈರತಿ ಬಸವರಾಜ್ ಅವರನ್ನು ವಶಕ್ಕೆ ಪಡೆಯಲು ಸಿಐಡಿ ತಂಡ ಸಜ್ಜಾಗಿದೆ. ಕಳೆದ 15 ದಿನಗಳಿಂದ ಅವರ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿರುವ ತನಿಖಾ ತಂಡ, ಅಗತ್ಯವಿದ್ದಲ್ಲಿ ಲುಕ್ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಇದೆ.
ಪ್ರಕರಣದ ಹಿನ್ನಲೆ
2025 ಜುಲೈ 15ರಂದು ರಾತ್ರಿ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸೂರು ಲೇಕ್ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬಿಕ್ಲು ಶಿವನ ತಾಯಿ, ಬೈರತಿ ಬಸವರಾಜ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಿಸಿದ್ದರು.
ಬೈರತಿ ಬಸವರಾಜ್ ಎ5 ಆರೋಪಿಯಾಗಿ ಹೆಸರು ಕಾಣಿಸಿಕೊಂಡಿದ್ದು, ಜಾಮೀನು ಕೋರಿ ಹಲವು ಬಾರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಮಧ್ಯಂತರ ನಿರೀಕ್ಷಣಾ ಜಾಮೀನು ದೊರೆತಿದ್ದರೂ ಇದೀಗ ಹೈಕೋರ್ಟ್ ಅದನ್ನು ವಜಾಗೊಳಿಸಿದ್ದು, ಅವರ ಮುಂದಿನ ಕಾನೂನು ಹೋರಾಟ ಸುಪ್ರೀಂ ಕೋರ್ಟ್ನಲ್ಲಿ ಮುಂದುವರಿಯುವ ಸಾಧ್ಯತೆ ಇದೆ.










