ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ನಿರಾಕರಣೆ, ಬೈರತಿ ಬಸವರಾಜ್‌ಗೆ ಬಂಧನದ ಭೀತಿ!

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಭಾರೀ ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೇಶದ ಉನ್ನತ ನ್ಯಾಯಾಲಯ ಇಂದು (ಫೆ. 12) ವಜಾಗೊಳಿಸಿದೆ.

ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಬೈರತಿ ಬಸವರಾಜ್ ಅವರು ಕೂಡಲೇ ಪೊಲೀಸರ ಮುಂದೆ ಶರಣಾಗಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದೆ. ಇದರಿಂದ ಬಂಧನದಿಂದ ತಪ್ಪಿಸಿಕೊಳ್ಳಲು ಇದ್ದ ಕೊನೆಯ ಕಾನೂನು ಅವಕಾಶವೂ ಕೈ ತಪ್ಪಿದಂತಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅವರ ಬಂಧನ ಈಗ ಅನಿವಾರ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಇದೇ ವೇಳೆ, ಕಳೆದ ಕೆಲವು ದಿನಗಳಿಂದ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಅವರು ವಿದೇಶದಲ್ಲಿ ಇರುವ ಸಾಧ್ಯತೆಗಳ ಬಗ್ಗೆ ಮಾಹಿತಿ ಹರಿದಾಡುತ್ತಿದೆ. ಸಿಐಡಿ ಈಗಾಗಲೇ ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದು, ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಲ್ಲಿ ಅವರು ಅಡಗಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ.