ಬೆಂಗಳೂರು : ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಭಾಷಣ ಮುಗಿಸಿ ಹೊರಟ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಶಾಸಕರು ಅಡ್ಡಗಟ್ಟಿದ ಕ್ರಮವನ್ನು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಇದನ್ನು ‘ಕರಾಳ ದಿನ’ ಎಂದು ಅವರು ಕರೆದಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಶೋಕ್, ಸಂವಿಧಾನ ಪ್ರಕಾರ ರಾಜ್ಯಪಾಲರು ತಮ್ಮ ಕರ್ತವ್ಯವನ್ನು ನಿರ್ವಹಿಸಿ ಧನ್ಯವಾದ ಸಲ್ಲಿಸಿ ಹೊರಟಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸಿದ್ದು, ಭಾಷಣವನ್ನು ಓದದೇ ಹೊರಡುವ ಅಧಿಕಾರವೂ ಅವರಿಗೆ ಇದೆ ಎಂದು ಸ್ಪಷ್ಟಪಡಿಸಿದರು. ಆದರೆ ಕಾಂಗ್ರೆಸ್ ಶಾಸಕರು ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿರುವುದು ಗೂಂಡಾಗಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಅಧಿವೇಶನವನ್ನು ಕರಾಳ ರೀತಿಯಲ್ಲಿ ನಡೆಸಿದೆ ಎಂದು ಆರೋಪಿಸಿದರು.
ಸದನದಲ್ಲಿ ಅಗೌರವ ತೋರಿದವರ ವಿರುದ್ಧ ಕ್ರಮಕ್ಕೆ ಆಗ್ರಹ
ರಾಜ್ಯಪಾಲರಿಗೆ ಅಡ್ಡಿಪಡಿಸಿದ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಆಗ್ರಹಿಸಿದರು. ಈ ಕುರಿತು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಪತ್ರ ಸಲ್ಲಿಸುವುದಾಗಿ ತಿಳಿಸಿದರು. ಸದನದಲ್ಲಿ ಅಗೌರವ ತೋರಿದ ಶಾಸಕರನ್ನು ಹೊರಹಾಕಬೇಕು ಎಂದೂ ಒತ್ತಾಯಿಸಿದರು.
ಇದೇ ರಾಜ್ಯಪಾಲರು ಸರ್ಕಾರದ ಅನೇಕ ಬಿಲ್‌ಗಳಿಗೆ ಸಹಿ ಹಾಕಿದ್ದಾರೆ. ಆಗ ರಾಜ್ಯಪಾಲರು ಸರಿಯಾಗಿದ್ದರುನಾ ಎಂದು ಕಾಂಗ್ರೆಸ್‌ಗೆ ಪ್ರಶ್ನಿಸಿದರು. ಲೋಕಭವನವನ್ನು ಕಾಂಗ್ರೆಸ್ ಭವನವನ್ನಾಗಿಸಲು ‘ಕೈ’ ಸರ್ಕಾರ ಹೊರಟಿದೆ. ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಲು ಈ ಕುತಂತ್ರ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ವಿರುದ್ಧ ಬಿವೈ ವಿಜಯೇಂದ್ರ ವಾಗ್ದಾಳಿ
ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು. ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ನಡೆಸಲು ಸದನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದರು. ನರೇಗಾ ಯೋಜನೆಯಲ್ಲಿ ಕೇಂದ್ರ ಸರ್ಕಾರ ಕೆಲವು ಸುಧಾರಣೆಗಳನ್ನು ತಂದಿರುವುದನ್ನು ನೆಪ ಮಾಡಿಕೊಂಡು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದರು. 140 ಶಾಸಕರ ಬೆಂಬಲವಿದೆ ಎಂಬ ದರ್ಪದಲ್ಲಿ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದರು.










