ಭಾಲ್ಕಿ (ಬೀದರ್) : ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ತೀವ್ರ ಸಂತಾಪ

ಭಾಲ್ಕಿ (ಬೀದರ್) : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟ ಘಟನೆಗೆ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ತಕ್ಷಣ ಧಾವಿಸಿ ಪರಿಸ್ಥಿತಿ ನಿಭಾಯಿಸುವಂತೆ ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದಾಳಿ ನಡೆಸಿದ ಆನೆಯನ್ನು ಮರಳಿ ಕಾಡಿಗೆ ಕಳುಹಿಸಲು ಅಥವಾ ಸೆರೆಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರತಿಯೊಂದು ಜೀವವೂ ಅಮೂಲ್ಯ ಎಂದು ಹೇಳಿದ ಖಂಡ್ರೆ, ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ಒದಗಿಸಲು ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಾನವ ಜೀವ ಹಾನಿ ತಪ್ಪಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು, ಆನೆಗಳ ಸಂಚಾರ ಕುರಿತು ಸ್ಥಳೀಯರಿಗೆ ಎಚ್ಚರಿಕೆ ಸಂದೇಶ ರವಾನಿಸಲು ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ನಿಯೋಜಿಸಲು ಸೂಚಿಸಿದ್ದಾರೆ.