ಚನ್ನರಾಯಪಟ್ಟಣ: ಹಿರೀಸಾವೆಯಲ್ಲಿ ಪ್ರವಾಸಿ ಮಂದಿರ ನಿರ್ಮಿಸಲು 2 ಕೋಟಿ ರೂ. ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ತಾಲ್ಲೂಕಿನ ಹಿರೀಸಾವೆ ಗ್ರಾಮದ ಉಯ್ಯಾಲೆ ಕಂಬದ ಬೀದಿಯಲ್ಲಿ 1 ಕೋಟಿ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಸಮುದಾಯ ಆರೋಗ್ಯ ಕೇಂದ್ರದ ಅಭಿವೃದ್ಧಿಗೆ 1.50 ಕೋಟಿ ರೂ. ಅನುದಾನ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.
ಗ್ರಾಮದ ಪರಿಮಿತಿಯಲ್ಲಿ 5.65 ಕೋಟಿ ರೂ. ವೆಚ್ಚದಲ್ಲಿ ಚರಂಡಿ ನಿರ್ಮಾಣ, 2 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಮಾಜಿ ಶಾಸಕ ದಿ.ಎನ್.ಗಂಗಾಧರ್ ಅವರ ಹೆಸರಿನಲ್ಲಿ ನಿರ್ಮಿಸಿರುವ ಕ್ರೀಡಾಂಗಣವನ್ನು 20 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗಿದೆ. ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಹೆಚ್ಚಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಗ್ರಾಮದ ದೊಡ್ಡ ಕೆರೆಯ ಏರಿ ದುರಸ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಶ್ರೀಕಂಠಯ್ಯ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ಶ್ರವಣಬೆಳಗೊಳ ಮುಖ್ಯರಸ್ತೆ ಬದಿಯಲ್ಲಿ ಬಸ್ ತಂಗುದಾಣ ನಿರ್ಮಿಸಲು ಈಗಾಗಲೇ ಚಾಲನೆ ನೀಡಲಾಗಿದೆ. ತಾಲ್ಲೂಕು ಕೇಂದ್ರದ ಮಟ್ಟಕ್ಕೆ ಬೆಳೆಯುತ್ತಿರುವ ಹಿರೀಸಾವೆ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಜಿ.ರಾಮಕೃಷ್ಣ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಪರಮದ ದೇವರಾಜೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಅನಿಲ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹೆಚ್.ಎಸ್.ರವಿಕುಮಾರ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್, ನಿರ್ದೇಶಕ ಹಿಂದ್ಲಟ್ಟಿ ಬೋರೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮೇಶ್, ಮಾಜಿ ಅಧ್ಯಕ್ಷ ಬೋರಣ್ಣ, ಸದಸ್ಯೆ ವೇದಾವತಿ ಮಂಜುನಾಥ್, ಪ್ರಮುಖರಾದ ವೆಂಕಟೇಶ್, ಮಂಜುನಾಥ್, ರೋಡ್ ಮಂಜು, ಬಾಬು ಹಾಗೂ ಇತರರು ಇದ್ದರು.










