ಚಿಕ್ಕಮಗಳೂರು: ಕಾಫಿನಾಡು–ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ದಾರಿ ಚಾರ್ಮಾಡಿ ಘಾಟ್‌ನಲ್ಲಿ ಈಗಿನಿಂದ ಹೊಸ ನಿಯಮ ಜಾರಿಯಾಗಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಒಂದೆರಡು ವಾಹನಗಳಿಗಲ್ಲ, ಕನಿಷ್ಠ ಐದು ವಾಹನಗಳು ಸೇರಿದ್ದಾಗ ಮಾತ್ರ ಪ್ರವೇಶ ಸಿಗಲಿದೆ.
ರಾತ್ರಿ ವೇಳೆ ಚೆಕ್‌ಪೋಸ್ಟ್ ದಾಟುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಲಾಗುತ್ತಿದ್ದು, ಐದು ವಾಹನಗಳು ಒಟ್ಟಾಗಿ ಹೊರಡುವಂತೆ ವ್ಯವಸ್ಥೆ ರೂಪಿಸಲಾಗಿದೆ.
ಏಕೆ ಈ ಹೊಸ ಕ್ರಮ?
ದಟ್ಟ ಅರಣ್ಯದಿಂದ ಸುತ್ತುವರಿದ ಈ ಘಾಟ್‌ನಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಇತರ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಹೆಚ್ಚಾಗುತ್ತಿದ್ದು, ಇದಕ್ಕೆ ತಡೆಯೊಡ್ಡಲು ಪೊಲೀಸರು ಮುಂದಾಗಿದ್ದಾರೆ.
ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ,
“ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಈಗಿರುವ ಬ್ಯಾರಿಕೇಡ್ ಬದಲಾಗಿ ಹೊಸ ಭೂಮ್ ಬ್ಯಾರಿಯರ್ ನಿರ್ಮಿಸಲಾಗುತ್ತಿದೆ. ರಾತ್ರಿ ವೇಳೆ ಒಬ್ಬ ಪಿಎಸೈ ನೇತೃತ್ವದಲ್ಲಿ ಪೊಲೀಸರು ಕಾವಲು ನಿಲ್ಲಲಿದ್ದಾರೆ. ಜೊತೆಗೆ ಚೆಕ್‌ಪೋಸ್ಟ್‌ನಿಂದ ಒಂದೂವರೆ ಕಿಮೀ ದೂರದಲ್ಲಿರುವ ಕಚ್ಚಾ ರಸ್ತೆಯನ್ನು ಗೋ ಕಳ್ಳರು ದುರುಪಯೋಗ ಮಾಡುತ್ತಿರುವ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ, ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ ಆ ರಸ್ತೆಯಲ್ಲಿ ಗೇಟ್ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಗೇಟ್ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಿರಲಿದೆ” ಎಂದು ವಿವರಿಸಿದರು.
ಇನ್ನುಮುಂದೆ ಕೊಟ್ಟಿಗೆಹಾರ ಚೆಕ್‌ಪೋಸ್ಟ್ ಮೂಲಕ ಹಾದು ಹೋಗುವ ಎಲ್ಲಾ ವಾಹನಗಳ ವಿವರಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಲಿದ್ದು, ಪೊಲೀಸರ ದಾಖಲೆ ಪುಸ್ತಕದಲ್ಲೂ ಲಿಖಿತವಾಗಲಿದೆ.
ಒಟ್ಟಾರೆ, ಚಾರ್ಮಾಡಿ ಘಾಟ್‌ನಲ್ಲಿ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಎಸ್ಪಿ ವಿಕ್ರಂ ಅಮಟೆ ರೂಪಿಸಿರುವ ಈ ಮಾಸ್ಟರ್ ಪ್ಲಾನ್ ಸಾರ್ವಜನಿಕರಿಂದ ಮೆಚ್ಚುಗೆ ಪಡೆದುಕೊಂಡಿದೆ.










