ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಐದಕ್ಕೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದರೂ, ಪಕ್ಷದೊಳಗಿನ ಒಗ್ಗಟ್ಟು ಮಾತ್ರ ಮೂಡಿಲ್ಲ. ‘ಕಾಫಿನಾಡ ಕೈ ಕೋಟೆ’ಯಲ್ಲಿ ಆಂತರಿಕ ಅಸಮಾಧಾನ ತೀವ್ರಗೊಂಡಿದೆ.
ಡಿಕೆ.ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಎಂ.ಎಲ್. ಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಜೊತೆಗೆ ಮಾಜಿ ಜಿಲ್ಲಾ ಅಧ್ಯಕ್ಷ, ಮಾಜಿ ಸಿಡಿಎ ಅಧ್ಯಕ್ಷ ಹಾಗೂ ಹಾಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದಾರೆ.
40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಎಂ.ಎಲ್. ಮೂರ್ತಿ, ಪಕ್ಷ ಅಧಿಕಾರಕ್ಕೆ ಬಂದರೂ ಯಾವುದೇ ಹುದ್ದೆ ನೀಡದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದರೂ, ನಾಯಕರ ನಡುವೆ ಹೊಂದಾಣಿಕೆ ಕೊರತೆ ಇರುವುದೇ ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ.
ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಸಾಧಿಸಿದ ಕಾಂಗ್ರೆಸ್‌ನಲ್ಲಿ ಇದೀಗ ಒಡಕು ಸ್ಪಷ್ಟವಾಗಿದ್ದು, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಆಂತರಿಕ ಸಂಘರ್ಷಕ್ಕೆ ಇದು ಮುನ್ನುಡಿಯಾಗುತ್ತಿದೆ.










