ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ: ರಾತ್ರೋರಾತ್ರಿ ನಡೆದಿದ್ದೇನು?

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಐದಾರು ಯುವಕರು ಕಲ್ಲು ತೂರಾಟ ನಡೆಸಿದ ಆರೋಪದ ಹಿನ್ನೆಲೆ ಕೋಮು ಉದ್ವಿಗ್ನತೆ ಉಂಟಾಗಿದೆ. ಕಳೆದ ಮೂರು ದಿನಗಳಿಂದ ಕೆಲ ಯುವಕರು ಸ್ಥಳೀಯ ಹೆಣ್ಣು ಮಕ್ಕಳನ್ನು ಹಿಂಬಾಲಿಸುವುದು ಹಾಗೂ ಕಲ್ಲು ತೂರಾಟ ಮಾಡುವುದಾಗಿ ನಿವಾಸಿಗಳು ಆರೋಪಿಸಿದ್ದಾರೆ. ಘಟನೆ ವೇಳೆ ಇಬ್ಬರನ್ನು ಹಿಡಿದ ಕೆಲ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಘಟನೆ ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಪೊಲೀಸ್ ಠಾಣೆಯ ಮುಂದೆ ಎರಡೂ ಕೋಮಿನ ನೂರಾರು ಯುವಕರು ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇತ್ತ ಆಸ್ಪತ್ರೆ ಮುಂದೆಯೂ ಜನಸಮೂಹ ಹೆಚ್ಚಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹಲ್ಲೆಗೊಳಗಾದ ಯುವಕರಿಗೆ ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾತ್ರಿ ಹೊತ್ತಿನಲ್ಲಿ ಕೆಲವು ಯುವಕರು ಓಡಾಟ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಅವುಗಳನ್ನು ಪರಿಶೀಲಿಸುತ್ತಿದ್ದಾರೆ. ವಿಜಯಪುರ ಬಡಾವಣೆಯ ಸುಧಾ ಎಂಬವರ ಮನೆ ಮೇಲೆ ಕಲ್ಲು ತೂರಾಟ ನಡೆದಿರುವುದಾಗಿ ಹೇಳಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಮುಖಂಡ ಮುನೀರ್ ಪ್ರತಿಕ್ರಿಯೆ ನೀಡಿದ್ದು, ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡೂ ಪಾಳಯದವರ ಹೇಳಿಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.