ಆಲೂರು : ಗ್ರಾಮೀಣ ಪ್ರದೇಶದಲ್ಲಿರುವ ರಸ್ತೆಗಳ ಅಭಿವೃದ್ಧಿಪಡಿಸುವುದರಿಂದ ಗ್ರಾಮಗಳು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಸರ್ಕಾರದ ಅನುದಾನಕ್ಕೆ ಅನುಗುಣವಾಗಿ ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದ್ದು, ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಗ್ರಾಮೀಣ ರಸ್ತೆ ಅಭಿವೃದ್ಧಿ, ಕುಡಿಯುವ ನೀರು, ಶೌಚಾಲಯ , ಶಾಲಾ, ಅಂಗನವಾಡಿ ಕೋಣೆಗಳು ಹೀಗೆ ಕ್ಷೇತ್ರದ ಕೆಲಸಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಕಾರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣಿಪುರ ಜಂಕ್ಷನ್ ಬಳಿ ಮಣಿಪುರ ಮತ್ತು ಪುರಭೈರವನಹಳ್ಳಿಗೆ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿ,ಭರತೂರು ಗ್ರಾಮದ ಪರಿಮಿತಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ.ಬಾಳಿಗನಹಳ್ಳಿ ಗ್ರಾಮದ ಪರಿಮಿತಿಯ ರಸ್ತೆ, ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳುಗರವಳ್ಳಿ ಗ್ರಾಮಸ್ಥರ ಬಹುವರ್ಷಗಳ ಬೇಡಿಕೆಯಾಗಿದ್ದ ರಸ್ತೆ ನಿರ್ಮಾಣ ಕಾಮಗಾರಿ,
ಕಟ್ಟಾಯ ಹೋಬಳಿ ಕಾರ್ಲೆ ಪಂಚಾಯಿತಿ ವ್ಯಾಪ್ತಿಯ ದೇವಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬ್ರಹ್ಮಲಿಂಗೇಶ್ವರ ದೇವಾಲಯಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ.
ಈ ಎಲ್ಲಾ ಕಾಮಗಾರಿಗಳು ನಿಗದಿತ ಸಮಯದಲ್ಲಿ ಮುಗಿಯಬೇಕು. ಕೆಲಸ ಉತ್ತಮ ಗುಣಮಟ್ಟ ಕಾಯ್ದುಕೊಳ್ಳುವಂತೆ ಸ್ಥಳದಲ್ಲಿದ್ದ ಇಂಜಿನಿಯರ್ ಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಭಿಯಂತರರು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು,ಗ್ರಾಮಸ್ಥರು ಉಪಸ್ಥಿತರಿದ್ದರು.










