ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

K.R. Former JDS MP Prajwal Revanna has been found guilty of raping and then kidnapping a domestic worker from Nagar, and now the Special Court of Public Representatives in Bengaluru has announced the sentence.

ಬೆಂಗಳೂರು: ಕೆ.ಆರ್. ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ. ಐಪಿಸಿ ಸೆಕ್ಷನ್ 376(2)(k) ಅಡಿ ತೀರ್ಪು ಪ್ರಕಟಿಸಲಾಗಿದ್ದು, ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಪ್ರಜ್ವಲ್ ಅನುಭವಿಸಬೇಕಿದೆ.

ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ. ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ.

ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು. ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.