- ಹಾಸನ ನಗರದ ದೇವಮ್ಮ ಬಡಾವಣೆಯಲ್ಲಿ ಸಾಲದ ಒತ್ತಡದಿಂದ ಮನನೊಂದು ಆಟೋ ಚಾಲಕ ಶಿವರಾಜ್ (40) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ
ಹಾಸನ(kannadapost.com): ಬ್ಯಾಂಕ್ ಸಾಲ ಸೇರಿದಂತೆ ಸಾಕಷ್ಟು ಕೈ ಸಾಲ ಮಾಡಿಕೊಂಡಿದ್ದ ಆಟೋ ಚಾಲಕನೊಬ್ಬ ಸಾಲ ತೀರಿಸಲಾಗದೆ ಮನನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ದೇವಮ್ಮ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಶಿವರಾಜ್ (40) ಎಂದು ಗುರುತಿಸಲಾಗಿದೆ.
ಶಿವರಾಜ್ ಅವರು ಬ್ಯಾಂಕ್ ಸಾಲದ ಜತೆಗೆ ಸಾಕಷ್ಟು ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಸಾಲ ತೀರಿಸಲಾಗದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಸಾಲದ ವಿಚಾರವಾಗಿ ಕುಟುಂಬದಲ್ಲಿ ಪ್ರತಿನಿತ್ಯ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಮನನೊಂದು ಶಿವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಹಾಗೂ ಎಫ್ಎಸ್ಎಲ್ (ವಿಧಿವಿಜ್ಞಾನ ಪ್ರಯೋಗಾಲಯ) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












