ಹಾಸನ: ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಅಲ್ಯೂಮಿನಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಲೋಕಾಯುಕ್ತ ಪೊಲೀಸ್ ವತಿಯಿಂದ “ಜಾಗೃತಿ ಅರಿವು ಸಪ್ತಾಹ – 2025” ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಾಸನ ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಅವರು, “ಭ್ರಷ್ಟಾಚಾರ ತಡೆಯುವುದು ಪ್ರತಿಯೊಬ್ಬ ನಾಗರಿಕನ ನೈತಿಕ ಕರ್ತವ್ಯವಾಗಿದೆ. ಅಧಿಕಾರಿಗಳು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಯಾವುದೇ ಸಂದರ್ಭದಲ್ಲೂ ಲಂಚ ಸ್ವೀಕರಿಸಬಾರದು. ಪ್ರಾಮಾಣಿಕತೆ ಮತ್ತು ದೇಶಾಭಿಮಾನದಿಂದ ಕೆಲಸ ಮಾಡಿದಾಗ ಮಾತ್ರ ಸಮಾಜ ಶುದ್ಧವಾಗುತ್ತದೆ” ಎಂದು ಹೇಳಿದರು.
ಅವರು ಮುಂದುವರಿದು, “1984ರಲ್ಲಿ ಸ್ಥಾಪನೆಯಾದ ಕರ್ನಾಟಕ ಲೋಕಾಯುಕ್ತ ಸಂಸ್ಥೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಭ್ರಷ್ಟಾಚಾರದ ವಿರುದ್ಧ ಶ್ರಮಿಸುತ್ತಿದೆ. ಲಂಚ ಅಥವಾ ಮೋಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಂಥವರ ಬಗ್ಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.
ಕಾರ್ಯಕ್ರಮದ ಆರಂಭದಲ್ಲಿ “ಲಂಚ ಸ್ವೀಕರಿಸಬಾರದು, ಭ್ರಷ್ಟಾಚಾರಕ್ಕೆ ತುತ್ತಾಗಬಾರದು” ಎಂಬ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಡಾ. ಹೆಚ್.ಎನ್. ನರಸಿಂಹನ್ ವಹಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಇಂದಿರಾ ಬಹದ್ದೂರು, ಎನ್‌ಎಸ್‌ಎಸ್ ಅಧಿಕಾರಿ ಡಾ. ವಿಜಯ್ ಕುಮಾರ್ ತೀಲೆ, ರಿಜಿಸ್ಟ್ರಾರ್ ಕುಮುದ ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










