- Hassan ಜಿಲ್ಲೆ, ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಬಗರ್ ಹುಕುಂ ಅಕ್ರಮ ಭೂ ಮಂಜೂರಾತಿ ಆರೋಪದಡಿ ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
Hassan|ಹಾಸನ: ಬಗರ್ ಹುಕುಂ ಅಕ್ರಮ ಭೂ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ ಸಿಐಡಿ ಅಧಿಕಾರಿಗಳ ವಿಶೇಷ ತಂಡ, ಹಳೇಬೀಡಿನಲ್ಲಿರುವ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರ ನಿವಾಸದ ಮೇಲೆ ದಾಳಿ ನಡೆಸಿ, ಅವರನ್ನು ವಶಕ್ಕೆ ಪಡೆದುಕೊಂಡಿದೆ. ಹೆಚ್ಚಿನ ವಿಚಾರಣೆಗಾಗಿ ಅಧಿಕಾರಿಗಳು ಅವರನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಪ್ರಕರಣದ ಹಿನ್ನೆಲೆ:
2018ರಲ್ಲಿ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕೆ.ಎಸ್. ಲಿಂಗೇಶ್ ಅವರು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಭೂ ಮಂಜೂರಾತಿ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು.
ಈ ಸಂಬಂಧ ಕೋಲಾರ ಮೂಲದ ಆರ್‌ಟಿಐ ಕಾರ್ಯಕರ್ತ ರಮೇಶ್‌ಕುಮಾರ್ ಎಂಬುವವರು ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಇದೀಗ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಮಾಜಿ ಶಾಸಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಬೆಳವಣಿಗೆ ಹಾಸನ ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.











