Hassan|ಹಾಸನ, ಜೂನ್ 15: ನಗರದ ಚನ್ನಪಟ್ಟಣದಲ್ಲಿರುವ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಫಾರಂಗೆ ನುಗ್ಗಿದ ಬಸ್ ಬಸ್ಗಾಗಿ ಕಾಯುತ್ತಾ ಕುಳಿತಿದ್ದ ಯುವಕನಿಗೆ ಡಿಕ್ಕಿ ಹೊಡೆದಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ.
ಚಿಕ್ಕಮಗಳೂರು ಮೂಲದ ಮಂಜುನಾಥ್ ಗಾಯಗೊಂಡಿದ್ದು ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಿಲ್ದಾಣದಲ್ಲಿ ಚಿಕ್ಕಮಗಳೂರಿಗೆ ತೆರಳಲು ಬಸ್ಗಾಗಿ ಕಾಯುತ್ತ ಕುಳಿತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ KA-21 F-0151 ಸಂಖ್ಯೆಯ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಪ್ಲಾಟ್ಫಾರಂ ಕಡೆಗೆ ನುಗ್ಗಿ ಮಂಜುನಾಥ್ ಅವರಿಗೆ ಡಿಕ್ಕಿ ಹೊಡೆದಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಸ್ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದ ಪರಿಣಾಮ ಈ ಅವಘಡ ಸಂಭವಿಸಿದೆ.
ಅವಘಡದ ಬಳಿಕ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಾಲಕನ ನಿರ್ಲಕ್ಷ್ಯದ ವಿರುದ್ಧ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಹಗಲು ವೇಳೆಯಲ್ಲಿ ಈ ಘಟನೆ ನಡೆದಿದ್ದರೆ ಇನ್ನಷ್ಟು ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.










