Hassan|ಹಾಸನ, ಮೇ 30: ಹಾಸನ ನಗರದ ಬಿಎಂ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ಉಪತಹಶೀಲ್ದಾರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ತಿಮ್ಮಯ್ಯ (52) ಎಂದು ಗುರುತಿಸಲಾಗಿದೆ. ಅವರು ಪ್ರಸ್ತುತ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ, ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು.
ತಿಮ್ಮಯ್ಯ ಅವರು ಬಿಎಂ ರಸ್ತೆಯಲ್ಲಿರುವ ಲಾಡ್ಜ್‌ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ನಾಲ್ಕು ಪುಟಗಳ ಡೆತ್‌ನೋಟ್ ಬರೆದಿಟ್ಟಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಅವರು ಸುಮಾರು ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದು, ಜಿಲ್ಲೆಯ ಆಡಳಿತ ವಲಯದಲ್ಲಿ ಪರಿಚಿತರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಸುದ್ದಿ ತಿಳಿಯುತ್ತಿದ್ದಂತೆ ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಡೆತ್‌ನೋಟ್ ಆಧರಿಸಿ ತನಿಖೆ ಮುಂದುವರಿದಿದೆ.
ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.










