Hassan: ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳ ಗುಣಮಟ್ಟ ಹೆಚ್ಚಿಸಲು ಒತ್ತು: ಸಂಸದ ಶ್ರೇಯಸ್ ಪಟೇಲ್

ಆರೋಗ್ಯಕರ ಹಾಸನ ಜಿಲ್ಲೆಯ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಬದ್ಧರಾಗಿದ್ದೇವೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ.

Hassan|ಹಾಸನ: ಜಿಲ್ಲೆಯ ಗರ್ಭಿಣಿಯರು, ಮಕ್ಕಳು, ಹಿರಿಯ ನಾಗರಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ. ಪಟೇಲ್ ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಜನತೆಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆಗಳನ್ನು ತಲುಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಆರೋಗ್ಯ ಸೇವೆಗಳ ವಿತರಣೆಯಲ್ಲಿ ಯಾವುದೇ ರೀತಿಯ ಲೋಪಗಳು ಕಂಡುಬರದಂತೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಲಭ್ಯವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಲಾಯಿತು. ತಾಯಿ ಮತ್ತು ಶಿಶು ಆರೋಗ್ಯ, ಲಸಿಕಾ ಕಾರ್ಯಕ್ರಮ, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ, ತುರ್ತು ವೈದ್ಯಕೀಯ ಸೇವೆಗಳು, ವೈದ್ಯರು ಹಾಗೂ ಸಿಬ್ಬಂದಿಗಳ ಲಭ್ಯತೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು.

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವ ಜೊತೆಗೆ ಆಸ್ಪತ್ರೆಗಳ ಸ್ವಚ್ಛತೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ರೋಗಿ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಸದರು ಸೂಚಿಸಿದರು.

ಮುಂಗಾರು ಹಿನ್ನೆಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರೋಗಗಳ ಹರಡುವಿಕೆಯನ್ನು ತಡೆಯಲು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಪ್ರಗತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಇಲಾಖೆ ಎದುರಿಸುತ್ತಿರುವ ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು. ಆರೋಗ್ಯ ಸೇವೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಮಾರ್ಗದರ್ಶನ ಮತ್ತು ಸೂಚನೆಗಳನ್ನು ನೀಡಲಾಯಿತು.

“ಆರೋಗ್ಯಕರ ಹಾಸನ ಜಿಲ್ಲೆಯ ನಿರ್ಮಾಣ ನಮ್ಮ ಗುರಿಯಾಗಿದೆ. ಜಿಲ್ಲೆಯ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಹಾಗೂ ಸುಲಭವಾಗಿ ಲಭ್ಯವಾಗುವ ಆರೋಗ್ಯ ಸೇವೆಗಳನ್ನು ಒದಗಿಸಲು ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಬದ್ಧರಾಗಿದ್ದೇವೆ”  –ಸಂಸದ ಶ್ರೇಯಸ್ ಎಂ. ಪಟೇಲ್