ಹಾಸನ: ಸಕಲೇಶಪುರ ತಾಲ್ಲೂಕಿನ ಬೆಳಗೋಡು ಸಮೀಪದ ಮೂಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರ ನಡೆಯುತ್ತಿದ್ದ ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿಯ ಸತ್ತಿಗರಹಳ್ಳಿ ಗ್ರಾಮಕ್ಕೆ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮೃತರಿಗೆ ಅಂತಿಮ ನಮನ ಸಲ್ಲಿಸಿದ ಸಂಸದರು, ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ತಕ್ಷಣದ ನೆರವಿನ ರೂಪವಾಗಿ ಮೃತರ ಕುಟುಂಬಕ್ಕೆ ₹50,000 ಆರ್ಥಿಕ ಸಹಾಯವನ್ನು ನೀಡಿದರು.
ಕಾಡಾನೆ ದಾಳಿಯಿಂದ ಅಮೂಲ್ಯ ಜೀವ ಕಳೆದುಕೊಂಡಿರುವುದು ಅತ್ಯಂತ ದುಃಖಕರ ಘಟನೆ ಎಂದು ಅವರು ಸಂತಾಪ ವ್ಯಕ್ತಪಡಿಸಿದರು. ಇಂತಹ ದಾಳಿಗಳು ಮರುಕಳಿಸದಂತೆ ಅರಣ್ಯ ಇಲಾಖೆ ಜನವಸತಿ ಪ್ರದೇಶಗಳ ಸುತ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸರ್ಕಾರದಿಂದ ದೊರೆಯಬೇಕಾದ ಪರಿಹಾರವನ್ನು ಶೀಘ್ರವಾಗಿ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡುವುದಾಗಿ ಸಂಸದರು ಭರವಸೆ ನೀಡಿದರು.
ಈ ದುರ್ಘಟನೆಯಿಂದ ಸತ್ತಿಗರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಶೋಕದ ವಾತಾವರಣ ಆವರಿಸಿದೆ










