ಹಾಸನ: ಕರ್ನಾಟಕ ಸರ್ಕಾರದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಸನ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ.) ಜಿಲ್ಲಾ ಶಾಖೆ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ 20 ಮತ್ತು 21 ಜನವರಿ 2026 ರಂದು ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ಹಾಸನ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ನಡೆಯಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಕೃಷ್ಣಗೌಡ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಕ್ರೀಡಾಪಟುಗಳು ಹಾಗೂ ಗಣ್ಯ ಅತಿಥಿಗಳು ಭಾಗವಹಿಸಲಿದ್ದು ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಲಾಗುವುದು ಎಂದರು. ಸ್ಪರ್ಧೆಗಳು ನಡೆಯಲಿದ್ದು ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳ ನೌಕರರು ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.
ಇದರಿಂದ ನೌಕರರಲ್ಲಿ ಆರೋಗ್ಯಕರ ಜೀವನಶೈಲಿ, ಸ್ನೇಹಭಾವ ಹಾಗೂ ತಂಡದ ಮನೋಭಾವನೆ ಬೆಳೆಸುವ ಉದ್ದೇಶ ಹೊಂದಲಾಗಿದೆ. ಇದೇ ದಿನ ಸಂಜೆ 6 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲೇ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.
ನೃತ್ಯ, ಗಾಯನ, ನಾಟಕ, ಜನಪದ ಹಾಗೂ ದೇಶಭಕ್ತಿ ಗೀತೆಗಳಂತಹ ವಿವಿಧ ಕಲಾ ಪ್ರದರ್ಶನಗಳ ಮೂಲಕ ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಗುತ್ತಿದ್ದು, ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.
ಜಿಲ್ಲಾ ಮಟ್ಟದ ಈ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸರ್ಕಾರಿ ನೌಕರರು ಹಾಗೂ ವಿದ್ಯಾರ್ಥಿಗಳಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಶಾರೀರಿಕ, ಮಾನಸಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಲಕ್ಷ್ಮೀಕಾಂತ, ಹೇಮಂತ್, ರವೀಂದ್ರ, ಆಶಾ, ವೆಂಕಟೇಶ್ ಹಾಗೂ ಇತರರು ಉಪಸ್ಥಿತರಿದ್ದರು.










