ಹಾಸನ : ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (HIMS) ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಅಭಿವೃದ್ಧಿಗೆ ರೂ. 27.93 ಕೋಟಿ ಅನುದಾನ ಮಂಜೂರು, ಜಿಲ್ಲಾ ಜನರ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ

ಹಾಸನ: ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (HIMS) ಅನ್ನು ಮತ್ತಷ್ಟು ಅಭಿವೃದ್ಧಿಪಡಿಸಿ, ಜಿಲ್ಲೆಯ ಜನರ ಆರೋಗ್ಯದ ಅವಶ್ಯಕತೆಗಳನ್ನು ಪೂರೈಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರಮುಖ ನಿರ್ಧಾರ ಕೈಗೊಂಡಿದೆ.

ಹಾಸನ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿಕೊಂಡ ತಕ್ಷಣವೇ, ಸೆಪ್ಟೆಂಬರ್ 22 ರಂದು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಾದ ಬಾಕಿ ಕಾಮಗಾರಿ ಪೂರ್ಣಗೊಳಿಸಲು ರೂ. 9 ಕೋಟಿ ಅನುದಾನ ಮಂಜೂರು ಮಾಡಲಾಗಿತ್ತು. ಪ್ರಸ್ತುತ ಕಟ್ಟಡ ಕಾಮಗಾರಿ ಅಂತಿಮ ಹಂತದಲ್ಲಿದೆ.

ಆಸ್ಪತ್ರೆಯನ್ನು ಸಂಪೂರ್ಣ ಕಾರ್ಯರೂಪಕ್ಕೆ ತರಲು ಸರ್ಕಾರ ಮತ್ತೊಂದು ದೊಡ್ಡ ಹೆಜ್ಜೆ ಇಟ್ಟಿದೆ. ಸೆಪ್ಟೆಂಬರ್ 6 ರಂದು ಆಸ್ಪತ್ರೆಗೆ ಭೇಟಿ ನೀಡಿದ ವೇಳೆ, ಪ್ರಾಥಮಿಕ ಹಂತದಲ್ಲಿ ಕಾರ್ಡಿಯಾಲಜಿ, ನ್ಯೂರಾಲಜಿ, ನ್ಯೂರೋಸರ್ಜರಿ, ಯುರಾಲಜಿ ಮತ್ತು ಕಾರ್ಡಿಯೋ ಥೊರಾಸಿಕ್ ಸರ್ಜರಿ ವಿಭಾಗಗಳು ಕಾರ್ಯಾರಂಭ ಮಾಡುವಂತೆ ಹಾಗೂ ಕ್ಯಾತ್ ಲ್ಯಾಬ್ ಸೌಲಭ್ಯವಿರುವ ಕಾರ್ಡಿಯಾಕ್ ಯುನಿಟ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.

ಇದರಂತೆ, ಆಸ್ಪತ್ರೆ ವತಿಯಿಂದ ರೂ. 27.93 ಕೋಟಿ ಅನುದಾನದ ಪ್ರಸ್ತಾವನೆ ಸಲ್ಲಿಸಲಾಯಿತು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಆ ಪ್ರಸ್ತಾವನೆಗೆ ಅನುಮೋದನೆ ನೀಡಿ, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯನ್ನು ತ್ವರಿತವಾಗಿ ಕಾರ್ಯರೂಪಕ್ಕೆ ತರಲು ತೀರ್ಮಾನಿಸಿದೆ.

ಈ ನಿರ್ಧಾರದಿಂದ ಹಾಸನ ಜಿಲ್ಲೆಯ ಜನರ ಆರೋಗ್ಯ ಸೇವೆಗೆ ಮಹತ್ವದ ಬಲ ಸಿಗಲಿದೆ.

“ಹಾಸನ ಜನರ ದ್ವನಿಗೆ ಗೌರವ ನೀಡಿ, ನಮ್ಮ ಮನವಿಗೆ ಸ್ಪಂದಿಸಿದ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರಿಗೆ ಹೃತ್ಪೂರ್ವಕ ಧನ್ಯವಾದಗಳು,” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.