ಹಾಸನ: ಅಖಿಲ ಕರ್ನಾಟಕ ಅರಣ್ಯ ಮತ್ತು ಸಾವಯವ ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ “ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ-2026” ಅನ್ನು ಫೆಬ್ರವರಿ 6ರಿಂದ 8ರವರೆಗೆ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಜ.26 ರಂದು ಬೆಳಗ್ಗೆ 11 ಗಂಟೆಗೆ ಹಾಸನ ನಗರದ ಚನ್ನಪಟ್ಟಣ ಕೆರೆ, ಹಾಸನಾಂಬ ಉದ್ಯಾನವನ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹತ್ತಿರ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಯೋಗೇಶ್ ಅವರು ತಿಳಿಸಿದರು. ಸಿರಿಧಾನ್ಯಗಳ ಮಹತ್ವವನ್ನು ಜನರಿಗೆ ಪರಿಚಯಿಸುವುದು, ಸಾವಯವ ಕೃಷಿಯತ್ತ ರೈತರನ್ನು ಉತ್ತೇಜಿಸುವುದು ಹಾಗೂ ಆರೋಗ್ಯಕರ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದೇ ಈ ಮೇಳದ ಪ್ರಮುಖ ಉದ್ದೇಶವಾಗಿದೆ ಎಂದರು.
ಮೇಳದ ಭಾಗವಾಗಿ ‘ಸಿರಿಧಾನ್ಯ ನಡಿಗೆ Millets Walkathon 2026″. ಕೃಷಿ ತಜ್ಞರಿಂದ ಉಪನ್ಯಾಸಗಳು, ರೈತರಿಗೆ ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ತರಬೇತಿ ಕಾರ್ಯಾಗಾರಗಳು, ಸಿರಿಧಾನ್ಯ ಆಧಾರಿತ ಆಹಾರ ಮೇಳ, ಆರೋಗ್ಯ ತಪಾಸಣಾ ಶಿಬಿರ, ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಿರಿಧಾನ್ಯಗಳ ಬಳಕೆಯಿಂದ ಮಧುಮೇಹ, ರಕ್ತದೊತ್ತಡ, ಹೃದಯ ರೋಗ ಸೇರಿದಂತೆ ಅನೇಕ ಜೀವನಶೈಲಿ ರೋಗಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂಬ ಕುರಿತು ತಜ್ಞರಿಂದ ಮಾಹಿತಿ ನೀಡಲಾಗುವುದು. ಜೊತೆಗೆ ರೈತರಿಗೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭದಾಯಕವಾದ ಸಿರಿಧಾನ್ಯ ಕೃಷಿ ವಿಧಾನಗಳು, ಸಾವಯವ ಗೊಬ್ಬರ ಬಳಕೆ. ಮಾರುಕಟ್ಟೆ ಸಂಪರ್ಕ ಹಾಗೂ ಮೌಲ್ಯವರ್ಧನೆ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಮೇಳದಲ್ಲಿ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ರೈತರು, ಮಹಿಳಾ ಸ್ವಸಹಾಯ ಸಂಘಗಳು, ಕೃಷಿ ವಿಜ್ಞಾನಿಗಳು, ವೈದ್ಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ. ಸಿರಿಧಾನ್ಯಗಳ ಮಹತ್ವವನ್ನು ಮನೆಮಾತಾಗಿಸಿ, ಆರೋಗ್ಯಕರ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಈ ಮೇಳ ಮಹತ್ವದ ಪಾತ್ರ ವಹಿಸಲಿದೆ ಎಂದು ಆಯೋಜಕರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಕಾಶ್, ಸುಧಾಕರ್, ಡಾ. ನಟರಾಜ್, ಡಾ. ಮಂಜುನಾಥ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.










