ಹಾಸನ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವಂತೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಹಾಗೂ ರೋಟರಿ ಕ್ಲಬ್ ಆಫ್ ಹಾಸನ ರಾಯಲ್ ಸಂಯುಕ್ತ ಆಶ್ರಯದಲ್ಲಿ “ಪರೀಕ್ಷಾ ಸಿದ್ಧತೆ ಮತ್ತು ಆತ್ಮವಿಶ್ವಾಸ – HOW TO FACE EXAM” ಎಂಬ ವಿಶೇಷ ಶಿಬಿರವನ್ನು ಜನವರಿ 20ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಹಾಸನ ರಾಯಲ್ ಅಧ್ಯಕ್ಷ ಟೈಮ್ಸ್ ಗಂಗಾಧರ್ ಹೇಳಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ನಗರ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಲಿದ್ದು, ಶಿಕ್ಷಣ ತಜ್ಞರಾದ ಎ.ಎಚ್. ಸಾಗರ್ ಅವರು ಪರೀಕ್ಷಾ ಸಿದ್ಧತೆ, ಸಮಯ ನಿರ್ವಹಣೆ ಹಾಗೂ ಆತ್ಮವಿಶ್ವಾಸ ವೃದ್ಧಿ ಕುರಿತು ಪ್ರಾಯೋಗಿಕ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಶ್ರೀಮತಿ ಲತಾ ಕುಮಾರಿ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲಾ ಗವರ್ನರ್ ರೊ. ಪಾಲಾಕ್ಷ ಕೆ., ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಲರಾಮ್ ಕೆ.ಎನ್., ಹಾಸನ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ರೋಟರಿ ಜೋನ್–9ರ ಸಹಾಯಕ ಗವರ್ನರ್ ಮಂಜುನಾಥ್ ಜೆ.ಎನ್., ವಲಯ ಸೇನಾನಿಗಳಾದ ಮಮತಾ ಪಾಟೀಲ್, ಕಾರ್ಯಕ್ರಮ ಮುಖ್ಯಸ್ಥ ಯೋಗೇಶ್ ಎಸ್. ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಈ ಶಿಬಿರವನ್ನು ಆಯೋಜಿಸಲಾಗುತ್ತಿದ್ದು, ಪ್ರತಿ ವರ್ಷವೂ ಸುಮಾರು 1200ಕ್ಕೂ ಹೆಚ್ಚು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಶೈಕ್ಷಣಿಕ ಸಾಧನೆ ಮಾಡುತ್ತಿದ್ದಾರೆ. ಈ ವರ್ಷವೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಟೈಮ್ಸ್ ಗಂಗಾಧರ್ ಮನವಿ ಮಾಡಿದರು.
ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಪೋಷಕರು, ಶಿಕ್ಷಕರು ಹಾಗೂ ಮಾಧ್ಯಮದವರು ಕಾರ್ಯಕ್ರಮಕ್ಕೆ ಬೆಂಬಲ ನೀಡಬೇಕೆಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ರೊ.ರವಿಕುಮಾರ್. ಪಿ, ಖಜಾಂಚಿ ರೊ.ದಿಲೀಪ್ ಕುಮಾರ್. ಎಚ್.ಕೆ, ಮಾಜಿ ಅಧ್ಯಕ್ಷ ರೊ. ಸಚಿನ್.ಯು.ವಿ, ರೊ.ಯೋಗೀಶ್, ರೊ.ಶ್ರೀನಂದ್ ಇದ್ದರು










