ಚಾಮರಾಜನಗರ,ಫೆಬ್ರವರಿ,26,2026(www.kannadapost.com): ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ ಅವರು, “ಬರಿ ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿಗಳನ್ನೇ ಸರಿಯಾಗಿ ಜಾರಿಗೊಳಿಸಲು ಆಗುತ್ತಿಲ್ಲ. ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಯಲ್ಲಿ ಸರ್ಕಾರ ಸಂಪೂರ್ಣವಾಗಿ ಎಡವಿದೆ” ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳು ತಿರುಗಿಬಿದ್ದಿದ್ದಾರೆ. ಈಗ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಆದರೆ ಅಂತಿಮವಾಗಿ ಏನು ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೆಚ್‌ಡಿಕೆ ಹೇಳಿದರು.
🛑 ಗುತ್ತಿಗೆದಾರರ ಸ್ಥಿತಿ ಕಳವಳಕಾರಿ
ಇನ್ನೂ ಮಾತನಾಡಿದ ಅವರು, “ಗುತ್ತಿಗೆದಾರರು ಬದುಕಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ‘40% ಕಮಿಷನ್’ ಎಂಬ ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದರು. ಆದರೆ ಈಗ ಸರ್ಕಾರವೇ ಏನು ಮಾಡುತ್ತಿದೆ?” ಎಂದು ಪ್ರಶ್ನಿಸಿದರು.
ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಸರ್ಕಾರ ಪರದಾಡುತ್ತಿದೆ. ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕೆ ನಡೆಸಿದರು.
ರಾಜ್ಯದಲ್ಲಿ ಉದ್ಯೋಗ ಸಮಸ್ಯೆ ದಿನೇ ದಿನೇ ಗಂಭೀರವಾಗುತ್ತಿದ್ದು, ಸರ್ಕಾರ ತಕ್ಷಣ ಖಾಲಿ ಹುದ್ದೆಗಳ ಭರ್ತಿಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದೆ.










