ಚನ್ನರಾಯಪಟ್ಟಣ : ಹಲವು ಕಾರಣಗಳಿಂದಾಗಿ ಮಕ್ಕಳು ಇನ್ನು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಮಕ್ಕಳಿಗೆ ಶಿಕ್ಷಣ ಕೊಡಿಸಿದರೆ ಮಾತ್ರ ಅವರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಹೋಬಳಿ ಶಿಕ್ಷಣ ಸಂಯೋಜಕ ಕರಿಯಪ್ಪ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಕಲ್ಕೆರೆ ಗ್ರಾಮದ ಶ್ರೀ ರಾಘವೇಂದ್ರ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ 2025 -26 ನೇ ಸಾಲಿನ 37ನೇ ಶ್ರೀ ರಾಘವೇಂದ್ರ ಸಂಭ್ರಮ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಂದು ಮಗುವು ಶಿಕ್ಷಣದಿಂದ ವಂಚಿತವಾಗಬಾರದು ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಪೋಷಕರು ಹೆಚ್ಚು ಆಸಕ್ತಿ ವಹಿಸಬೇಕು ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು.
ಈ ಭಾಗದಲ್ಲಿ ಕಳೆದ 37 ವರ್ಷಗಳಿಂದ ಶ್ರೀ ರಾಘವೇಂದ್ರ ಆಂಗ್ಲ ಮಾಧ್ಯಮ ಶಾಲೆ ಕಡಿಮೆ ಶುಲ್ಕ ಪಡೆದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಶಾಲೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಯವರ ಪ್ರತಿನಿತ್ಯ ರಾಯರ ಆರಾಧನೆಯೊಂದಿಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಪ್ರಶಂಸನೀಯ ಎಂದರು.
ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ಟಿ. ಕುಮಾರ್ ಮಾತನಾಡಿ, ಕಳೆದ 37 ವರ್ಷಗಳಿಂದ ಶ್ರೀ ರಾಘವೇಂದ್ರ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲಾಗುತ್ತಿದೆ ಮಕ್ಕಳಿಗೆ ಕಲಿಕೆಯ ಜೊತೆಗೆ ವಿಭಿನ್ನ ಕಾರ್ಯಕ್ರಮಗಳನ್ನು ಸಂಸ್ಥೆ ಆಯೋಜಿಸುವ ಮೂಲಕ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಸಿ. ಎನ್. ಚೆಲುವೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಒಂದು ಖಾಸಗಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬಳಸುವುದು ಅಷ್ಟೊಂದು ಸುಲಭವಲ್ಲ ಪಟ್ಟಣಗಳಲ್ಲಿರುವ ಖಾಸಗಿ ಶಾಲೆಗಳಿಗೆ ಸ್ಪರ್ಧೆ ಹೊಡುವ ಮೂಲಕ ಶ್ರೀ ರಾಘವೇಂದ್ರ ಆಂಗ್ಲ ಮಾಧ್ಯಮ ಶಾಲೆಯನ್ನು ಸದೃಢವಾಗಿ ನಡೆಸಲಾಗುತ್ತಿದೆ ಎಂದರು.
ಶಾಲಾ ವಾರ್ಷಿಕೋತ್ಸವ ಅಂಗವಾಗಿ ಮಕ್ಕಳಿಗೆ ಹಾಗೂ ಪೋಷಕರಿಗೆ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ ಸ್ಪರ್ಧೆಯಲ್ಲಿ ವಿಜೇತಗೊಂಡವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ತಾಲೂಕು ಕಾಂಗ್ರೆಸ್ ಯುವ ಮುಖಂಡ ಶಶಾಂಕ್ ಗೋಪಾಲಸ್ವಾಮಿ, ಕಲ್ಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಶೋಕ್, ಸಂಸ್ಥೆಯ ನಿರ್ದೇಶಕರುಗಳಾದ ಕೆ.ಎನ್. ತೋಪೇಗೌಡ, ಸಿ.ಎಂ. ಸೋಮಶೇಖರ್, ಟಿ ಆರ್ ಪಿ ಮಮತಾ, ಕೃಷಿ ಪತ್ತಿನ ಉಪಾಧ್ಯಕ್ಷ ಕೆ. ಟಿ. ಪ್ರಭಾಕರ್, ಜೆಡಿಎಸ್ ಮುಖಂಡ ಬೈರೇಗೌಡ, ಕೃಷಿ ಪತ್ತಿನ ನಿರ್ದೇಶಕರುಗಳಾದ ಹೋಟೆಲ್ ಮಂಜು, ದೇವರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕೆ. ಎಸ್. ವಾಸುದೇವ್, ಶಾಲೆಯ ಮುಖ್ಯ ಶಿಕ್ಷಕಿ ಸಿ.ಸಿ. ಹೇಮಾವತಿ, ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಹಾಗೂ ಮಕ್ಕಳ ಪೋಷಕರು ಪಾಲ್ಗೊಂಡಿದ್ದರು.
Hobli Education Coordinator Kariyappa Gowda expressed the opinion that children are being deprived of education due to many reasons. Only if children are educated can they make a living.










