- ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ತಂಬಾಕು, ನಿಕೋಟಿನ್ ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ಮಾರಾಟವನ್ನು ಒಂದು ವರ್ಷದ ಕಾಲ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಬುಧವಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶವಿರುವ ‘ಗುಟ್ಕಾ’ ಮತ್ತು ‘ಪಾನ್ ಮಸಾಲ’ ಉತ್ಪನ್ನಗಳ ಮಾರಾಟವನ್ನು ಒಂದು ವರ್ಷದ ಕಾಲ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ವಿತರಣೆ ಹಾಗೂ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಷೇಧವು ಆದೇಶ ಹೊರಡಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ಜಾರಿಯಲ್ಲಿರಲಿದೆ.
ಯಾವೆಲ್ಲಾ ಉತ್ಪನ್ನಗಳು ಬ್ಯಾನ್?
- ತಂಬಾಕು ಮತ್ತು ನಿಕೋಟಿನ್ ಅಂಶಗಳನ್ನು ಒಳಗೊಂಡಿರುವ ಗುಟ್ಕಾ ಮತ್ತು ಪಾನ್ ಮಸಾಲ ಉತ್ಪನ್ನಗಳು.
- ಪ್ಯಾಕೆಟ್‌ಗಳಲ್ಲಿ ಅಥವಾ ಬಿಡಿಯಾಗಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳು.
- ಗ್ರಾಹಕರಿಗೆ ಸುಲಭವಾಗಿ ಮಿಶ್ರಣ ಮಾಡಲು ಅನುಕೂಲವಾಗುವಂತೆ ಪ್ರತ್ಯೇಕವಾಗಿ (ಸ್ಯಾಶೆಟ್/ಪೌಚ್) ಪ್ಯಾಕ್ ಮಾಡಿ ಮಾರಾಟ ಮಾಡುವ ತಂಬಾಕು ಹಾಗೂ ನಿಕೋಟಿನ್ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.
ಯಾವ ಕಾಯ್ದೆಯಡಿ ಕ್ರಮ? ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರ ಸೆಕ್ಷನ್ 30(2)(ಎ) ಮತ್ತು 2011 ರ ಆಹಾರ ಸುರಕ್ಷತೆ ನಿಯಮಾವಳಿ (ಮಾರಾಟ ನಿಷೇಧ ಮತ್ತು ನಿರ್ಬಂಧ) 2.3.4 ರ ಅನ್ವಯ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ: ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದಾದ್ಯಂತ ವಿಶೇಷ ತನಿಖೆ ಮತ್ತು ದಾಳಿ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ. ಕಾನೂನು ಉಲ್ಲಂಘಿಸಿ ಈ ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
‘ವ್ಯಸನಮುಕ್ತ ಕರ್ನಾಟಕ’ಕ್ಕೆ ಸರ್ಕಾರದ ಕರೆ: ಮಾರಕ ಕಾಯಿಲೆಗಳಿಗೆ ಕಾರಣವಾಗುವ ತಂಬಾಕು ಉತ್ಪನ್ನಗಳ ಬಳಕೆಯನ್ನು ತಡೆಯಲು ಸರ್ಕಾರ ಈ ದಿಟ್ಟ ಹೆಜ್ಜೆ ಇಟ್ಟಿದೆ. ಎಲ್ಲೆಾದರೂ ನಿಷೇಧಿತ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ನಡೆಯುತ್ತಿರುವುದು ಕಂಡುಬಂದರೆ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ‘ಆರೋಗ್ಯಕರ ಮತ್ತು ವ್ಯಸನಮುಕ್ತ ಕರ್ನಾಟಕ’ ನಿರ್ಮಾಣಕ್ಕೆ ಸಾರ್ವಜನಿಕರು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.












