ಕೊಡಗು : ಕೊಡಗಿನಲ್ಲಿ ಸಂಚಲನ ಸೃಷ್ಟಿಸಿದ ಯುವಕನ ಕಾಮಕಾಂಡ ವಿಡಿಯೋ

ಕೊಡಗು : ಕೊಡಗು (Kodagu) ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಮೂಡಿಸಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ (Madikeri) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿಯಲ್ಲಿ ತೊಡಗಿ, ಆ ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಅದರ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಯ ಸ್ನೇಹಿತರೇ ಈ ವಿಡಿಯೋಗಳನ್ನು ವೈರಲ್ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಇದರ ನಡುವೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಯುವಕರ ಮೇಲೆ ಹಲ್ಲೆ ನಡೆದಿರುವ ವಿಡಿಯೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಹಲ್ಲೆಗಳು ಸವದ್ ಪರದವರಿಂದ ನಡೆದಿರಬಹುದೆಂಬ ಅನುಮಾನ ಇದ್ದರೂ, ಹಲ್ಲೆಗೆ ಒಳಗಾದವರು ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದ್ದು, ಸತ್ಯಾಂಶ ಹೊರತರುವ ನಿಟ್ಟಿನಲ್ಲಿ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸದ್ಯ, ಮೊಹಮ್ಮದ್ ಸವದ್ ಸಂಬಂಧಿತ ವೈರಲ್ ವಿಡಿಯೋಗಳು ಕೊಡಗು ಜಿಲ್ಲೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ.