ಹಾಸನ (kannadapost.com): ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಅಪರಾಧ ಪ್ರಕರಣ ನಿಯಂತ್ರಿಸುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಅಗಿಲೆ ಯೋಗೀಶ್, ಸೋಮವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮಂಗಳವಾರ ಎಸ್ಪಿ ಕಚೇರಿ ಎದುರು ವಿನೂತನವಾಗಿ ಬಾಯಿ ಬಡಿದುಕೊಳ್ಳುವ ಲಬೋ… ಲಬೋ… ಚಳುವಳಿ ನಡೆಸುವುದಾಗಿ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಜಿಲ್ಲೆಯಲ್ಲಿ ಅಪರಾಧ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ, ಅವುಗಳಿಗೆ ಕಡಿವಾಣ ಸಾಧ್ಯವಾಗಿಲ್ಲ. ಜಿಲ್ಲೆಯಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ, ವ್ಹೀಲಿಂಗ್ ಮಾಡುವ ಪುಂಡರ ಹಾವಳಿ ಹೆಚ್ಚಾಗಿದೆ. ರಸ್ತೆಗಳಲ್ಲೇ ಮಚ್ಚು-ಲಾಂಗ್ ಮಾರಕಾಸ್ತçಗಳನ್ನು ಹಿಡಿದು ಪುಂಡರು ಅಟ್ಟಹಾಸ ಪ್ರದರ್ಶನ ಮಾಡುತ್ತಿದ್ದಾರೆ. ಆದರೂ ಪೊಲೀಸ್ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡುತ್ತಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಸುದ್ದಿಮಾಧ್ಯಮಗಳಲ್ಲಿ ಪ್ರತಿನಿತ್ಯ ಅಪರಾಧ ಪ್ರಕರಣ ವರದಿಯಾಗುತ್ತಿವೆ. ಕೊಲೆ, ಸುಲಿಗೆ ಹಾಗೂ ದರೋಡೆ ಪ್ರಕರಣ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಆತಂಕದಲ್ಲಿ ಬದುಕುವಂತಾಗಿದೆ ಎಂದು ದೂರಿದರು.
ನಗರದಲ್ಲಿ ಮದ್ಯದ ಅಂಗಡಿಗಳ ಸಂಖ್ಯೆ ಹೆಚ್ಚಾಗಿದ್ದು, ರಾತ್ರಿ ವೇಳೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಓಡಾಡುವುದೇ ಕಷ್ಟಕರವಾಗಿದೆ. ಜಿಲ್ಲೆಯಲ್ಲಿ ಜನರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ ಎಂದು ತಿಳಿಸಿದರು.
ರಾತ್ರಿ ಗಸ್ತು ತಿರುಗುವ ಪೊಲೀಸರ ಸಂಖ್ಯೆ ಹೆಚ್ಚಿಸಿ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕು. ವ್ಹೀಲಿಂಗ್ ಮಾಡುವ ಪುಂಡರಿಗೆ ತಕ್ಷಣವೇ ಕಡಿವಾಣ ಹಾಕಬೇಕು. ಇಲ್ಲವಾದರೆ ಇನ್ನಷ್ಟು ಜೀವಹಾನಿಯಾಗುವ ಸಾಧ್ಯತೆ ಇದೆ. ಪುಡಿ ರೌಡಿಗಳ ಅಟ್ಟಹಾಸ ನಿಯಂತ್ರಿಸದಿದ್ದರೆ ಸಾರ್ವಜನಿಕರು ನೆಮ್ಮದಿಯಿಂದ ಬದುಕಲು ಸಾಧ್ಯವಾಗುವುದಿಲ್ಲ. ಕೂಡಲೇ ಐಜಿ ಅವರು ಜಿಲ್ಲೆಗೆ ಆಗಮಿಸಿ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸಬೇಕು.
ಸೋಮವಾರದೊಳಗೆ ಪೊಲೀಸ್ ಇಲಾಖೆ ಹಾಗೂ ಸಂಬAಧಪಟ್ಟ ಹಿರಿಯ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳದಿದ್ದರೆ, ಲಬೋ ಲಬೋ ಎಂದು ಬಾಯಿ ಬಡಿದುಕೊಳ್ಳುವ ವಿನೂತನ ಚಳುವಳಿ ನಡೆಸಲಾಗುವುದು. ಸ್ಥಳಕ್ಕೆ ಮೇಲಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಮಧು, ಶಂಕರ್, ಖಾದರ್, ಮಂಜುನಾಥ್, ವಿಕಾಸ್ ಇದ್ದರು.












