ಹಾಸನ: ನಿವೃತ್ತ ನೌಕರರ ಸಮಸ್ಯೆಗಳನ್ನು ಬಗೆಹರಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಈ ಕುರಿತು ನಾನೂ ಸೇರಿದಂತೆ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಗಮನ ಸೆಳೆಯೋಣ ಎಂದು ಸ್ಥಳೀಯ ಶಾಸಕ ಹೆಚ್.ಪಿ. ಸ್ವರೂಪ್ ಪ್ರಕಾಶ್ ಹೇಳಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ ಪದಾಧಿಕಾರಿಗಳು, ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರ ಸಮಾವೇಶದಲ್ಲಿ ಅವರು ಮಾತನಾಡಿದರು.
ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಆದ ನಂತರವೂ ಅನೇಕ ಬೇಡಿಕೆ, ಸಮಸ್ಯೆಗಳಿರುತ್ತವೆ. ಅವುಗಳನ್ನು ಬಗೆಹರಿಸುವುದು ಎಲ್ಲರ ಕರ್ತವ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ನೌಕರರ ಸಂಘದ ರಾಜ್ಯ ಅಧ್ಯಕ್ಷ ಕೆ. ಬ್ಯೆರಪ್ಪ, ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ನಿವೃತ್ತ ನೌಕರರು ಮತ್ತು 1 ಲಕ್ಷಕ್ಕೂ ಅಧಿಕ ಪಿಂಚಣಿದಾರರಿದ್ದು, ಅವರ ಅನೇಕ ಸಮಸ್ಯೆಗಳು ಇನ್ನೂ ಬಗೆಹರಿಯದೆ ಉಳಿದಿವೆ ಎಂದು ಹೇಳಿದರು.
ನಿವೃತ್ತ ನೌಕರರು ಹಾಗೂ ಪಿಂಚಣಿದಾರರಿಗೆ ಆರೋಗ್ಯ ಭಾಗ್ಯ ಯೋಜನೆಯನ್ನು ತಕ್ಷಣ ಜಾರಿಗೆ ತರಬೇಕು. ಕಾಲಮಾನಕ್ಕೆ ತಕ್ಕಂತೆ ನಿವೃತ್ತಿ ವೇತನ ಪರಿಷ್ಕರಣೆ ಮಾಡಿ ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಇದೇ ವೇಳೆ ಸಂಧ್ಯಾಕಿರಣ ಯೋಜನೆ ಜಾರಿಗೆ ತರಬೇಕು, ವೈದ್ಯಕೀಯ ಚಿಕಿತ್ಸೆಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕು. 7ನೇ ವೇತನ ಆಯೋಗದ ವರದಿಯಲ್ಲಿ ನಿವೃತ್ತ ನೌಕರರಿಗೆ ಸೂಕ್ತ ಆರ್ಥಿಕ ಸೌಲಭ್ಯ ಕಲ್ಪಿಸಬೇಕು. 70- 80 ವರ್ಷದ ನಿವೃತ್ತ ನೌಕರರಿಗೆ ಶೇ.10 ರಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಬೇಕು ಎಂದು ಮನವಿ ಮಾಡಿದರು.
ಪಿಂಚಣಿದಾರರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರುವುದರ ಜೊತೆಗೆ, ಶವ ಸಂಸ್ಕಾರಕ್ಕೆ ಕನಿಷ್ಠ 10 ಸಾವಿರ ನೆರವು ನೀಡಬೇಕು. ಈ ಸೌಲಭ್ಯ ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಈ ಎಲ್ಲ ಬೇಡಿಕೆ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟದ ರೂಪುರೇಷೆ ರೂಪಿಸ ಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಮಾವೇಶದಲ್ಲಿ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು, ನಿವೃತ್ತ ನೌಕರರು ಹಾಗೂ ಪಿಂಚಣಿದಾರರು ತಮ್ಮ ಸಮಸ್ಯೆ ಮತ್ತು ಬೇಡಿಕೆ ಕುರಿತು ಪ್ರಸ್ತಾಪಿಸಿದರು. ಸಮಾವೇಶದಲ್ಲಿ ಮೈಸೂರು ವಿಭಾಗದ 8 ಜಿಲ್ಲೆಗಳ ನಿವೃತ್ತ ನೌಕರರು ಹಾಗೂ ಪಿಂಚಣಿದಾರರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಆನಂತರಾಮು, ಪ್ರಧಾನ ಕಾರ್ಯದರ್ಶಿ ರಂಗೇಗೌಡ, ಖಜಾಂಚಿ ಎಸ್.ಎಂ. ಆನಂದಪ್ಪ, ಉಪಾಧ್ಯಕ್ಷ ಶ್ರೀನಿವಾಸ್, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ, ಉಪಾಧ್ಯಕ್ಷ ಕೆ.ಎಂ. ಶ್ರೀನಿವಾಸ್ ಮೊದಲಾದವರಿದ್ದರು.
Local MLA H.P. Swaroop Prakash said that it is the government’s top duty to resolve the problems of retired employees, and that the office bearers of the retired employees’ association, including myself, should meet the Chief Minister and draw his attention to this matter.










