ಚನ್ನರಾಯಪಟ್ಟಣ: ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಸಾಧಿಸಿಕೊಳ್ಳಲು ಹಾಗೂ ಪ್ರತಿಭೆಯನ್ನು ಪ್ರದರ್ಶಿಸಲು ಈ ಕಾರ್ಯಕ್ರಮವು ಮುಖ್ಯ ವೇದಿಕೆಯಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ತಾಲ್ಲೂಕಿನ ಅಕ್ಕನಹಳ್ಳಿ ಕೂಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ
ಎಫ್ಎಲ್ಎನ್ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಭೆಗಳನ್ನು ಮುಖ್ಯ ಭೂಮಿಕೆಗೆ ತರಲು ಇಂತಹ ಕಾರ್ಯಕ್ರಮ ಅಗತ್ಯ ಎಂದರು.
ಶಿಕ್ಷಣದ ಜೊತೆಗೆ ಕ್ರೀಡೆ, ಸಾಹಿತ್ಯ ಹಾಗೂ ಕೃಷಿಗೆ ಸಂಬಂಧಪಟ್ಟಂತ ವಿಷಯಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಇನ್ನೂ ವಿದ್ಯಾರ್ಥಿಗಳು ಓದುವುದರ ಜೊತೆಗೆ ಬರವಣಿಗೆಗೆ ಹೆಚ್ಚಿನ ಆದ್ಯತೆ ನೀಡಿದ್ದಲ್ಲಿ ಪದ ಅಥವಾ ವಾಕ್ಯಗಳು ಪರಿಪೂರ್ಣವಾಗಿ ನೆನಪಿನಲ್ಲಿ ಉಳಿಯಲು ಸಾಧ್ಯವಾಗಲಿದೆ. ಗಟ್ಟಿತನದ ಓದು ಹಾಗೂ ಕೈಬರಹ ಅತಿಮುಖ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಾಲ ಮಾಡಿ ಮಕ್ಕಳಿಗೆ ವಿದ್ಯೆ ಕೊಡಿಸುವುದು ಬೇಡ. ಇದರಿಂದ ಕುಟುಂಬಗಳ ಮೇಲೆ ಆರ್ಥಿಕ ಹೊರೆ ಬೀಳಲಿದೆ. ಸರ್ಕಾರವು ಪುಸ್ತಕ, ಸಮವಸ್ತ್ರ, ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಉಚಿತವಾಗಿ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿಯೇ ಓದಿದಂತಹ ಅದೆಷ್ಟೋ ಮಹನೀಯರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿರುವುದು ಶ್ಲಾಘನೀಯ ಸಂಗತಿ ಎಂದು ತಿಳಿಸಿದರು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ಕೆಪಿಎಸ್ ವ್ಯವಸ್ಥೆ ಜಾರಿಗೊಳಿಸಿದ್ದು ತಾಲ್ಲೂಕಿನಲ್ಲಿ ಮೊದಲ ಬಾರಿಗೆ ನುಗ್ಗೇಹಳ್ಳಿಯಲ್ಲಿ ತೆರಲಾಯಿತು. ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ಶಾಲೆಯಲ್ಲಿ ಸಿಗುವ ಮೌಲ್ಯಯುತ ಶಿಕ್ಷಣದ ಜೊತೆಗೆ ಮನೆಯಲ್ಲಿ ಸಂಸ್ಕಾರ ಕಲಿಸುವುದು ಪಾಲಕರ ಜವಾಬ್ದಾರಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ
ಅಮ್ಮಂದಿರ ಪಾತ್ರ ಬಹುಮುಖ್ಯ. ಮಕ್ಕಳ ದೈನಂದಿನ ಚಟುವಟಿಕೆಯ ಮೇಲೆ ಪಾಲಕರು ಗಮನಹರಿಸುವುದು ಅಗತ್ಯವಿದೆ. ಟಿವಿ ವೀಕ್ಷಣೆ ಹಾಗೂ ಮೊಬೈಲ್ ಬಳಕೆಯಿಂದ ಮಕ್ಕಳನ್ನು ದೂರವಿಡಿ. ಇಲ್ಲವಾದಲ್ಲಿ ಮಕ್ಕಳು ಕೈತಪ್ಪಿ ಹೋದರೆ ಮತ್ತೆ ಸರಿ ಹಂತಕ್ಕೆ ತರುವುದು ಬಹಳ ಕಷ್ಟ ಎಂದು ಎಚ್ಚರಿಸಿದರು.
ಈ ಶಾಲೆಗೆ ಶೌಚಾಲಯ ಅಗತ್ಯವಿದ್ದು ಏಪ್ರಿಲ್ ತಿಂಗಳಲ್ಲಿ ಅನುದಾನ ಕಲ್ಪಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ಆಯಾ ವ್ಯಾಪ್ತಿಯ ತಲಾ 2 ಶಾಲಾ ಕಟ್ಟಡಗಳನ್ನು ದುರಸ್ತಿ ಕಾರ್ಯ ಮಾಡಲು ಆದ್ಯತೆ ನೀಡಲಾಗುವುದು. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರದಿಂದಲೇ ಕಾರ್ಯರೂಪಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಎಪಿಎಂಸಿ ಮಾಜಿ ಅಧ್ಯಕ್ಷರಾದ ಬಿ.ಸಿ.ದೊರೆಸ್ವಾಮಿ, ವಳಗೇರಹಳ್ಳಿ ಮಂಜೇಗೌಡ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಂಪತ್ ಕುಮಾರ್, ಗ್ರಾಪಂ ಅಧ್ಯಕ್ಷ ಉಮೇಶ್, ಮಾಜಿ ಉಪಾಧ್ಯಕ್ಷ ಪ್ರಕಾಶ್, ಸದಸ್ಯೆ ಸೌಭಾಗ್ಯಮ್ಮ, ಅಕ್ಕನಹಳ್ಳಿ ಸೊಸೈಟಿ ಅಧ್ಯಕ್ಷ ಮಧು, ನುಗ್ಗೇಹಳ್ಳಿ ಸೊಸೈಟಿ ಅಧ್ಯಕ್ಷ ವಿಕ್ಟರ್, ಎಸ್ಡಿಎಂಸಿ ಅಧ್ಯಕ್ಷ ಶೇಖರ್, ಸಿಆರ್‌ಪಿ ಸಂಘದ ಅಧ್ಯಕ್ಷ ಹೆಚ್.ಟಿ.ಮಂಜೇಗೌಡ, ಸಿಆರ್ ಪಿಗಳಾದ ಅಶೋಕ ಸುಂದರನ್, ಮಂಜೇಗೌಡ, ಪುಟ್ಟರಾಜು, ಮುಖ್ಯಶಿಕ್ಷಕ ರಾಹುಲ್ ಗೋವರ್ದನ್, ಪ್ರಮುಖರಾದ ಲಕ್ಷಣ್, ಪ್ರಭಾಕರ್, ಯೋಗೇಶ್, ಮಂಜಣ್ಣ ಹಾಗೂ ಪಾಲಕರು ಪಾಲ್ಗೊಂಡಿದ್ದರು.
MLA C.N. Balakrishna said that this program is a major platform for Channarayapatna students to achieve their potential and showcase their talents.










