ಸಕಲೇಶಪುರ: ಭಾರತೀಯ ಜನತಾ ಪಕ್ಷ, ಸೇವಾ ಪಾಕ್ಷಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ 15 ದಿನಗಳ ಕಾಲ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಗುರುವಾರ ಪಟ್ಟಣದ ಹಳೇಬಸ್ ನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75 ನೇ ಹುಟ್ಟುಹಬ್ಬದ ಅಂಗವಾಗಿ ತಾಲ್ಲೂಕು ಬಿಜೆಪಿ ಹಾಗೂ ಹಾಸನದ ಹಿಮ್ಸ್ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಪಕ್ಷದ ಸೂಚನೆಯಂತೆ ರಕ್ತದಾನ ಶಿಭಿರ,ಸ್ವಚ್ಚತಾ ಕಾರ್ಯ, ಪರಿಸರ ಸಂರಕ್ಷಣೆ ಹಾಗೂ ಮ್ಯಾರಥಾನ್ ಓಟ, ಆರೋಗ್ಯ ಶಿಬಿರದಂತಹ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು ಪಕ್ಷದ ಕೆಲಸವಾಗಿದೆ ಎಂದರು. ರಕ್ತದಾನ ಮಾಡುವುದರಿಂದ ಕೆಲವು ರೋಗಗಳನ್ನು ದೂರ ಮಾಡಬಹುದಾಗಿದ್ದು ನಿಯಮಿತವಾಗಿ ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ ಪ್ರಧಾನಿ ನರೇಂದ್ರಮೋದಿರವರ 75 ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಪಕ್ಷದ ನಿರ್ದೇಶನದಂತೆ ಜಿಲ್ಲೆಯ ಎಲ್ಲೆಡೆ 15 ದಿನಗಳ ಕಾಲ ವಿವಿಧ ಸೇವಾ ಚಟುವಟಿಕೆಗಳನ್ನು ಮಾಡಲಾಗುತ್ತಿದೆ ಎಂದರು.
ಈ ವೇಳೆ ನೂರಕ್ಕೂ ಅಧಿಕ ಜನರು ರಕ್ತದಾನ ಮಾಡಿದರು. ರಕ್ತದಾನ ಮಾಡಿದವರಿಗೆ ಸಸಿಗಳನ್ನು ಕಾಣಿಕೆಯಾಗಿ ನೀಡಿಲಾಯಿತು. ಈ ವೇಳೆ ರಕ್ತದಾನಿಗಳಿಗೆ ಮಾತ್ರವಲ್ಲದೆ ಸಾರ್ವಜನಿಕರಿಗೂ ಅನ್ನ ಸಂತರ್ಪಣೆ ಮಾಡಲಾಯಿತು.
ಈ ವೇಳೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಅಮಿತ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ತಾಲ್ಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್,ಪ್ರಧಾನ ಕಾರ್ಯದರ್ಶಿಗಳಾದ ಅಗ್ನಿ ಸೋಮಶೇಖರ್ , ಮಧು ಬೊಮ್ಮನಕೆರೆ, ಟಿಎಪಿಸಿಎಂಎಸ್ ಅಧ್ಯಕ್ಷ ಶಶಿಕುಮಾರ್, ಪಕ್ಷದ ಮುಖಂಡರುಗಳಾದ ಬ್ಯಾಕರವಳ್ಳಿ ಜಯಣ್ಣ, ಜಯಪ್ರಕಾಶ್, ಪುನೀತ್ ಬನ್ನಹಳ್ಳಿ, ಜಯಶಂಕರ್, ಶರತ್, ನವೀನ್, ನೇತ್ರಾವತಿ ಮಂಜುನಾಥ್, ಬಬಿತಾ ವಿಶ್ವನಾಥ್ ಮುಂತಾದವರು ಭಾಗವಹಿಸಿದ್ದರು.










