ನವದೆಹಲಿ : ಕರ್ನಾಟಕದಲ್ಲಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ: ಕೇಂದ್ರ ಅರಣ್ಯ ಸಚಿವರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಚರ್ಚೆ

ನವದೆಹಲಿ : ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ ಒದಗಿಸಿ ಜನರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವ ಉದ್ದೇಶದಿಂದ ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಸುದೀರ್ಘ ಹಾಗೂ ಮಹತ್ವದ ಚರ್ಚೆ ನಡೆಸಿದರು.

ಸಂಸತ್ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಆನೆ ದಾಳಿ ಹಾಗೂ ಇತರೆ ವನ್ಯಜೀವಿ ಉಪಟಳದ ಕುರಿತು ಕುಮಾರಸ್ವಾಮಿ ಅವರು ವಿಶೇಷವಾಗಿ ಗಮನ ಸೆಳೆದರು.

ಅರಣ್ಯದ ಅಂಚಿನ ಪ್ರದೇಶಗಳಲ್ಲಿ ವಾಸಿಸುವ ರೈತರು, ದನಕರುಗಳನ್ನು ಮೇಯಿಸುವ ಜನರು ವನ್ಯಜೀವಿ ದಾಳಿಗೆ ಬಲಿಯಾಗುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದ್ದು, ಹಲವರು ಪ್ರಾಣ ಕಳೆದುಕೊಂಡರೆ, ಇನ್ನೂ ಅನೇಕರು ಗಾಯಗೊಂಡು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗುತ್ತಿದ್ದಾರೆ. ಈ ಸಮಸ್ಯೆ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಅಗತ್ಯವಿದೆ ಎಂದು ಕುಮಾರಸ್ವಾಮಿ ಅವರು ಸಚಿವ ಭೂಪೇಂದ್ರ ಯಾದವ್ ಅವರ ಗಮನಕ್ಕೆ ತಂದರು.

ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಭೂಪೇಂದ್ರ ಯಾದವ್ ಅವರು, ವಿಷಯಕ್ಕೆ ತುರ್ತು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. ಅಗತ್ಯ ಮಾಹಿತಿಯನ್ನು ಕುಮಾರಸ್ವಾಮಿ ಅವರಿಂದ ಪಡೆದುಕೊಂಡು, ಸಮಸ್ಯೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನ ಮುಗಿಯುವೊಳಗೆ ಈ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಅತ್ಯಂತ ತ್ವರಿತವಾಗಿ ಪರಿಹಾರ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ಅಂತರ ಸಚಿವಾಲಯ ವಿಚಾರಗಳ ಕುರಿತ ಚರ್ಚೆ

ಈ ಸಂದರ್ಭದಲ್ಲೇ ಸಚಿವದ್ವಯರು ತಮ್ಮ ತಮ್ಮ ಇಲಾಖೆಗಳ ನಡುವಿನ ಸಮನ್ವಯತೆ, ಅಭಿವೃದ್ಧಿ ಸಂಬಂಧಿತ ವಿಷಯಗಳು ಹಾಗೂ ಉಕ್ಕು ಉದ್ಯಮದ ಬೆಳವಣಿಗೆಗೆ ಪರಿಸರ ಇಲಾಖೆಯಿಂದ ದೊರೆಯುತ್ತಿರುವ ಸಹಕಾರದ ಕುರಿತು ಸಹ ಸುದೀರ್ಘವಾಗಿ ಚರ್ಚಿಸಿದರು.