Sakaleshpura: 8 ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದರೆ ಬೃಹತ್ ಪ್ರತಿಭಟನೆ – ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಎಚ್ಚರಿಕೆ

Sakaleshpura|ಸಕಲೇಶಪುರ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ವ್ಯತ್ಯಯ ಖಂಡಿಸಿ ಸೆಸ್ಕ್ (CESC) ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ. 8 ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ.

Sakaleshpura|ಸಕಲೇಶಪುರ: ಕಳೆದ ಒಂದು ವಾರದಿಂದ ತಾಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುಂದಿನ ಎಂಟು ದಿನಗಳೊಳಗೆ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಸಾವಿರಾರು ಜನರನ್ನು ಸೇರಿಸಿ ಸೆಸ್ಕ್ (CESC) ಕಚೇರಿ ಎದುರು ಬೃಹತ್ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಶಾಸಕ  ಎಚ್.ಎಂ. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.

Sakleshpur CESC Protest
ಸಕಲೇಶಪುರದ ಸೆಸ್ಕ್ ಎಇಇ ಕಚೇರಿಯಲ್ಲಿ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಧರಣಿ ನಡೆಸಿದರು.

​ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ಗುರುವಾರ ಸೆಸ್ಕ್ ಕಚೇರಿ ಎದುರು ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ನಿರಂತರ ವಿದ್ಯುತ್ ಕಡಿತದಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ವಿದ್ಯುತ್ ಇಲ್ಲದೆ ಮೋಟಾರ್‌ಗಳ ಮೂಲಕ ನೀರು ಪೂರೈಸಲು ಸಾಧ್ಯವಾಗದೇ ಜನರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

​ವಿದ್ಯುತ್ ಸಮಸ್ಯೆ ಕುರಿತು ಕಾರ್ಯನಿರ್ವಾಹಕ ಎಂಜಿನಿಯರ್ (EE) ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಅವರಿಗೆ ಪದೇಪದೇ ಕರೆ ಮಾಡಿದರೂ ಅವರು ದೂರವಾಣಿ ಸ್ವೀಕರಿಸುತ್ತಿಲ್ಲ. ಒಂದುವೇಳೆ ಕರೆ ಸ್ವೀಕರಿಸಿದರೂ ಜವಾಬ್ದಾರಿಯುತವಾಗಿ ಸ್ಪಂದಿಸುತ್ತಿಲ್ಲ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಈ ನಿರ್ಲಕ್ಷ್ಯ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

​ಸೆಸ್ಕ್ ಇಲಾಖೆಯಲ್ಲಿನ ಭ್ರಷ್ಟಾಚಾರ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸಮನ್ವಯದ ಕೊರತೆಯಿಂದಾಗಿ ತಾಲೂಕಿನ ವಿದ್ಯುತ್ ವಿತರಣಾ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದ ಅವರು, “ಅಧಿಕಾರಿಗಳಿಗೆ ಎಂಟು ದಿನಗಳ ಗಡುವು ನೀಡಲಾಗಿದೆ. ಈ ಅವಧಿಯೊಳಗೆ ಪರಿಸ್ಥಿತಿ ಸುಧಾರಿಸದಿದ್ದರೆ ಬೃಹತ್ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೆ, ಕರ್ತವ್ಯಲೋಪವೆಸಗಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ಅಮಾನತು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಜೊತೆಗೆ, ಇಂಧನ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ತಾಲೂಕಿನ ವಿದ್ಯುತ್ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಡಲಾಗುವುದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

​ಈ ಪ್ರತಿಭಟನೆಯಲ್ಲಿ ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಪ್ರೇಮ್‌ನಾಥ್, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೋಹನ್, ತಾಲೂಕು ಉಪಾಧ್ಯಕ್ಷ ಸೋಮಶೇಖರ್ ಸೇರಿದಂತೆ ಸಂಘದ ಹಲವು ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.