ಸಕಲೇಶಪುರ / ಹಾಸನ (kannadapost.com): ವಿಧಾನ ಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶವು ಗ್ಯಾರಂಟಿಗಳ ಹೆಸರಿನಲ್ಲಿ ಅಬ್ಬರಿಸುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ ಮರ್ಮಾಘಾತ ನೀಡಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪಷ್ಟ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಪಟ್ಟಣದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಹಿಂದೆ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳ ಪೈಕಿ ಮೂರರಲ್ಲಿ ಬಿಜೆಪಿ ಹಾಗೂ ಒಂದರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಒಂದು ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಭಾರಿ ಅಂತರದಿಂದ ಜಯಗಳಿಸಿದ್ದಾರೆ. ಸುಮಾರು 140 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎಲ್ಲಾ ವಯೋಮಾನದ ಹಾಗೂ ಸಮುದಾಯದ ಪ್ರಜ್ಞಾವಂತ ಮತದಾರರು ರೈತ ಮತ್ತು ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಡಳಿತವನ್ನು ಸ್ಪಷ್ಟವಾಗಿ ಧಿಕ್ಕರಿಸಿದ್ದಾರೆ” ಎಂದರು.
ಇಡೀ ದೇಶಕ್ಕೆ ಸಂದೇಶ ನೀಡಿದ ಫಲಿತಾಂಶ:
“ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಸಹಿಸಿಕೊಳ್ಳಲಾಗದೆ ಹತಾಶರಾಗಿರುವ ರಾಹುಲ್ ಗಾಂಧಿ ಅವರು ಕೆಲವು ಸಂಘಟನೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಕೇಂದ್ರ ಸರ್ಕಾರವನ್ನು ಬುಡಮೇಲು ಮಾಡಲು ಯತ್ನಿಸುತ್ತಿದ್ದಾರೆ. ಎಸ್ಐಆರ್ (SIR) ಆರಂಭವಾದ ನಂತರ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ವೋಟ್ ಚೋರಿ, ಚುನಾವಣಾ ಆಯೋಗ ಹಾಗೂ ಸುಪ್ರೀಂ ಕೋರ್ಟ್ ವಿರುದ್ಧವೂ ಅಪಪ್ರಚಾರ ನಡೆಸುತ್ತಾ ಯುವಜನತೆಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸುವ ಷಡ್ಯಂತ್ರ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದ ಈ ಫಲಿತಾಂಶ ಇಡೀ ದೇಶಕ್ಕೆ ಸ್ಪಷ್ಟ ಸಂದೇಶ ರವಾನಿಸಿದೆ” ಎಂದು ವಾಗ್ದಾಳಿ ನಡೆಸಿದರು.
120-130 ಸ್ಥಾನಗಳಲ್ಲಿ ಗೆಲುವು ನಿಶ್ಚಿತ:
ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ನಡೆದರೂ ಬಿಜೆಪಿಯ ಕನಿಷ್ಠ 120 ರಿಂದ 130 ಶಾಸಕರು ಗೆಲ್ಲುವುದು ಶತಸಿದ್ಧವಾಗಿದ್ದು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.












