- ಸಕಲೇಶಪುರ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ವೈದ್ಯರ ತಂಡ ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು 10 ಕೆ.ಜಿ. ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಸುರಕ್ಷಿತವಾಗಿ ಹೊರತೆಗೆದಿದೆ. ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ.
ಸಕಲೇಶಪುರ, ಆ.6: ಪಟ್ಟಣದ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ವೈದ್ಯರ ತಂಡವು ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು 10 ಕೆ.ಜಿ. ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಸುರಕ್ಷಿತವಾಗಿ ಹೊರತೆಗೆದು ಮತ್ತೊಂದು ಮಹತ್ವದ ಸಾಧನೆ ಮಾಡಿದೆ.
ಪಟ್ಟಣದ ಕುಶಾಲನಗರ ಬಡಾವಣೆಯ ಹಬಿಬುನ್ನಿಸ (40) ಅವರು ಹಲವು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಹೊಟ್ಟೆಯ ಗಾತ್ರ ಹೆಚ್ಚಾಗುತ್ತಿದ್ದ ಕಾರಣ ದೈನಂದಿನ ಚಟುವಟಿಕೆಗಳಿಗೂ ತೊಂದರೆಯಾಗುತ್ತಿತ್ತು. ಚಿಕಿತ್ಸೆಗಾಗಿ ಅವರು ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಗೆ ಭೇಟಿ ನೀಡಿದ್ದರು.
ವೈದ್ಯಕೀಯ ತಪಾಸಣೆಯ ವೇಳೆ ಮಹಿಳೆಯ ಹೊಟ್ಟೆಯಲ್ಲಿ ಅಸಹಜವಾಗಿ ದೊಡ್ಡ ಗಡ್ಡೆ ಇರುವುದನ್ನು ವೈದ್ಯರು ಪತ್ತೆಹಚ್ಚಿದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಶಸ್ತ್ರಚಿಕಿತ್ಸೆಗೆ ಸಿದ್ಧಪಡಿಸಲಾಯಿತು.

ಹಿರಿಯ ಶಸ್ತ್ರಚಿಕಿತ್ಸಕ ಡಾ. ಪುರುಷೋತ್ತಮ್ ಅವರ ನೇತೃತ್ವದ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಸುಮಾರು 10 ಕೆ.ಜಿ. ತೂಕದ ಗಡ್ಡೆಯನ್ನು ಸುರಕ್ಷಿತವಾಗಿ ಹೊರತೆಗೆದಿದೆ. ಶಸ್ತ್ರಚಿಕಿತ್ಸೆಯ ಬಳಿಕ ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿಯೇ ಇಂತಹ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿರುವುದು ವೈದ್ಯರ ಪರಿಣತಿ ಹಾಗೂ ಆಸ್ಪತ್ರೆಯಲ್ಲಿನ ಗುಣಮಟ್ಟದ ವೈದ್ಯಕೀಯ ಸೇವೆಗೆ ಮತ್ತೊಂದು ಹೆಗ್ಗಳಿಕೆಯಾಗಿದ್ದು, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.












