
ಸಂಘ–ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ: ತಾ.ಆ.ವೈ. ಡಾ. ಮಹೇಶ್
ಸಕಲೇಶಪುರ, ಜೂನ್ 17,(www.kannadapost.com): ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ತಾಲೂಕಿನ ಎಲ್ಲಾ ಸಂಘ–ಸಂಸ್ಥೆಗಳು, ಚುನಾಯಿತ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪತ್ರಕರ್ತರು ಸಹಕರಿಸಬೇಕು ಎಂದು ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ಮಹೇಶ್ ಮನವಿ ಮಾಡಿದರು.
ಮಂಗಳವಾರ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಪಲ್ಸ್ ಪೋಲಿಯೋ ಚಾಲನಾ ಸಮಿತಿ ಕಾರ್ಯಪಡೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 1,30,738 ಜನಸಂಖ್ಯೆ ಇದ್ದು, ಐದು ವರ್ಷದೊಳಗಿನ 6,951 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಅಭಿಯಾನಕ್ಕಾಗಿ ತಾಲೂಕಿನಲ್ಲಿ ಒಟ್ಟು 73 ಪಲ್ಸ್ ಪೋಲಿಯೋ ಬೂತ್‌ಗಳನ್ನು ಸ್ಥಾಪಿಸಲಾಗುತ್ತಿದ್ದು, 300 ಸಿಬ್ಬಂದಿ ಹಾಗೂ 18 ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳ ಮೂಲಕ ಲಸಿಕೆ ವಿತರಣೆ ನಡೆಯಲಿದ್ದು, ಪಟ್ಟಣ ಪ್ರದೇಶಗಳಲ್ಲಿ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿಶೇಷ ಬೂತ್‌ಗಳನ್ನು ತೆರೆಯಲು ಯೋಜಿಸಲಾಗಿದೆ. ಜೂನ್ 28ರಂದು ಬೆಳಗ್ಗೆ 8 ಗಂಟೆಯಿಂದಲೇ ಲಸಿಕಾ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದರು.
ಸಾರ್ವಜನಿಕರಿಗೆ ಕಾರ್ಯಕ್ರಮದ ಕುರಿತು ವ್ಯಾಪಕ ಮಾಹಿತಿ ತಲುಪಿಸಲು ಜಾಗೃತಿ ಅಭಿಯಾನ ಕೈಗೊಳ್ಳಲು ಸೂಚಿಸಲಾಗಿದೆ. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಸ್ಥಳೀಯ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಅಗತ್ಯ ಸೌಲಭ್ಯ ಒದಗಿಸಲು ತೀರ್ಮಾನಿಸಲಾಗಿದೆ.
ಪಟ್ಟಣ ವ್ಯಾಪ್ತಿಯಲ್ಲಿ ಎರಡು ಮೊಬೈಲ್ ವಾಹನಗಳನ್ನು ನಿಯೋಜಿಸುವುದರ ಜೊತೆಗೆ ರೈಲ್ವೆ ನಿಲ್ದಾಣದ ಸೌಲಭ್ಯವನ್ನೂ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಜಾಗೃತಿ ಮೂಡಿಸುವ ಉದ್ದೇಶದಿಂದ ಮೈಕಿಂಗ್ ಮೂಲಕ ಪ್ರಚಾರ ನಡೆಸಲು ಸೂಚಿಸಲಾಗಿದೆ ಎಂದು ಡಾ. ಮಹೇಶ್ ತಿಳಿಸಿದರು.
ವಿವಿಧ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು. ಅಭಿಯಾನ ಆರಂಭಕ್ಕೂ ಮುನ್ನ ಹಾಗೂ ಪೂರ್ಣಗೊಳ್ಳುವವರೆಗೆ ಆರೋಗ್ಯ ಇಲಾಖೆ ಅಗತ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡಲಿದ್ದು, ಲಸಿಕೆ ಹಾಗೂ ಸಿಬ್ಬಂದಿ ಸಾಗಣೆಗೆ ಜಿಲ್ಲಾ ಮಟ್ಟದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಜೂನ್ 28, 29 ಹಾಗೂ 30ರಂದು ಮೂರು ದಿನಗಳ ಕಾಲ ಮತ್ತು ಪಟ್ಟಣ ಪ್ರದೇಶದಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಈ ವೇಳೆ ಚೆಸ್ಕಾಂ ಇಲಾಖೆ ಸಮರ್ಪಕ ವಿದ್ಯುತ್ ಪೂರೈಕೆ ಒದಗಿಸುವಂತೆ ಮನವಿ ಮಾಡಿದ ಡಾ. ಮಹೇಶ್, ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಕಂದಾಯ ಇಲಾಖೆಯ ಶಿರಸ್ತೇದಾರ್ ರವಿಕುಮಾರ್, ಚುನಾವಣಾ ಶಿರಸ್ತೇದಾರ್ ಜನಾರ್ಧನ್, ಶ್ವೇತಾ, ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.









