
ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆಗೆ BLOಗಳಿಗೆ ಸೂಚನೆ | ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ
ಸಕಲೇಶಪುರ, ಜೂನ್ 17(www.kannadapost.com): ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಹಾಗೂ ಬೂತ್ ಮಟ್ಟದ ಏಜೆಂಟರು (BLA) ಸಮನ್ವಯದಿಂದ ಕಾರ್ಯನಿರ್ವಹಿಸಿ, ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಪ್ರತಿಯೊಂದು ಮನೆಗೂ ಭೇಟಿ ನೀಡಿ ಮಾಹಿತಿ ಪರಿಶೀಲನೆ ನಡೆಸಬೇಕು ಎಂದು ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಸೂಚಿಸಿದರು.
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ದೇಶಾದ್ಯಂತ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಭಿಯಾನದ ಅಂಗವಾಗಿ, ಸಕಲೇಶಪುರ ತಾಲ್ಲೂಕು ಆಡಳಿತ ವತಿಯಿಂದ ಪಟ್ಟಣದ ಕುಶಾಲನಗರ ಬಡಾವಣೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಬಿಎಲ್‌ಎ-1 ಹಾಗೂ ಬಿಎಲ್‌ಎ-2 ಪ್ರತಿನಿಧಿಗಳಿಗಾಗಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯ ಮುಖ್ಯ ಉದ್ದೇಶ ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸುವುದು ಹಾಗೂ ಮೃತಪಟ್ಟವರು, ಸ್ಥಳಾಂತರಗೊಂಡವರು ಮತ್ತು ಅನರ್ಹ ಮತದಾರರ ಹೆಸರುಗಳನ್ನು ತೆರವುಗೊಳಿಸುವ ಮೂಲಕ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯಿಂದ ತಪ್ಪಾಗಿ ಕೈಬಿಟ್ಟಿರುವ ಅರ್ಹ ವ್ಯಕ್ತಿಗಳ ಹೆಸರುಗಳನ್ನು ಮರು ಸೇರ್ಪಡೆಗೊಳಿಸಲು ಅಗತ್ಯ ನಮೂನೆಗಳನ್ನು ಭರ್ತಿ ಮಾಡಲು ಸಾರ್ವಜನಿಕರಿಗೆ ಸಹಕರಿಸಬೇಕು. ಮತಗಟ್ಟೆ ಮಟ್ಟದಲ್ಲಿ ಕಂಡುಬರುವ ದೋಷಗಳನ್ನು ಗುರುತಿಸಿ ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳಿಗೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡುವಂತೆ ಸೂಚಿಸಿದರು.
ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, ಮುಂದಿನ ಒಂದು ತಿಂಗಳ ಅವಧಿಯಲ್ಲಿ BLOಗಳು ತಮ್ಮ ವ್ಯಾಪ್ತಿಯಲ್ಲಿರುವ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಪರಿಶೀಲಿಸಿ, ಅರ್ಹರಿಂದ ಅರ್ಜಿ ನಮೂನೆಗಳನ್ನು ಪಡೆದು ಸಲ್ಲಿಸಬೇಕು ಎಂದು ತಿಳಿಸಿದರು. ಈಗಾಗಲೇ ಮತದಾರರ ಸಂಪರ್ಕ ಕಾರ್ಯದಲ್ಲಿ ಶೇ.96.50ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ಕೈಬಿಡುವಿಕೆ, ತಿದ್ದುಪಡಿ ಹಾಗೂ ಅನಗತ್ಯ ಹೆಸರುಗಳ ಕುರಿತು ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೋಡಲ್ ಅಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್, ಮತದಾರರ ಪಟ್ಟಿಯಲ್ಲಿ ಅರ್ಹ ವ್ಯಕ್ತಿಯೊಬ್ಬರ ಹೆಸರೂ ಬಿಟ್ಟು ಹೋಗದಂತೆ ಅಧಿಕಾರಿಗಳು ಹಾಗೂ ಬಿಎಲ್‌ಎಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಹೆಸರು ಕೈಬಿಟ್ಟಿದ್ದರೆ ಅಥವಾ ಯಾವುದೇ ಆಕ್ಷೇಪಣೆಗಳಿದ್ದರೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದು ಎಂದು ತಿಳಿಸಿದರು. ಪ್ರತಿಯೊಬ್ಬ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಮೃತ ಮತದಾರರ ಹೆಸರುಗಳನ್ನು ಗುರುತಿಸಿ ಮಾಹಿತಿ ನೀಡುವುದು, ಸ್ಥಳಾಂತರಗೊಂಡವರ ಹೆಸರುಗಳನ್ನು ಪರಿಶೀಲಿಸುವುದು ಸೇರಿದಂತೆ ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಮಾಸ್ಟರ್ ಟ್ರೈನರ್ ಡಾ. ದಿನೇಶ್ ತರಬೇತಿ ನೀಡಿ ಮಾತನಾಡಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಚುನಾವಣಾ ವ್ಯವಸ್ಥೆಯ ಅತ್ಯಂತ ಪ್ರಮುಖ ಭಾಗವಾಗಿದೆ ಎಂದರು. 18 ವರ್ಷ ಪೂರ್ಣಗೊಂಡ ಯುವ ಮತದಾರರ ನೋಂದಣಿ, ಹೊಸದಾಗಿ ಸ್ಥಳಾಂತರಗೊಂಡ ಅರ್ಹ ನಾಗರಿಕರ ಸೇರ್ಪಡೆ, ಮೃತ ಹಾಗೂ ಅನರ್ಹ ಮತದಾರರ ಹೆಸರು ತೆರವು ಮತ್ತು ತಿದ್ದುಪಡಿ ಕಾರ್ಯಗಳನ್ನು ನಿಯಮಾನುಸಾರ ಕೈಗೊಳ್ಳಬೇಕು ಎಂದು ವಿವರಿಸಿದರು.
ಹೊಸ ಮತದಾರರ ಸೇರ್ಪಡೆಗೆ ಫಾರ್ಮ್–6, ಹೆಸರು ತೆರವಿಗೆ ಫಾರ್ಮ್–7, ತಿದ್ದುಪಡಿಗೆ ಫಾರ್ಮ್–8 ನಮೂನೆಗಳ ಕುರಿತು ಮಾಹಿತಿ ನೀಡಿದರು. BLOಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಸ್ಟರ್ ಟ್ರೈನರ್ ಹರ್ಷ ಸಿ., ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಬಿಎಲ್‌ಎ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.









